ADVERTISEMENT

ಡಿ. 23ರಿಂದ ವೀರಶೈವ–ಲಿಂಗಾಯತ ಮಹಾ ಅಧಿವೇಶನ: ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2023, 15:53 IST
Last Updated 6 ಅಕ್ಟೋಬರ್ 2023, 15:53 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ದಾವಣಗೆರೆ: ‘ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನವನ್ನು ಡಿಸೆಂಬರ್‌ 23, 24ರಂದು ಇಲ್ಲಿನ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದೆ’ ಎಂದು ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದರು.

ಅಧಿವೇಶನ ಸಂಬಂಧ ನಗರದಲ್ಲಿ ಶುಕ್ರವಾರ ನಡೆದ ಮಹಾಸಭಾದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ವೀರಶೈವ–ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ, ಸಮುದಾಯ ಎದುರಿಸುತ್ತಿರುವ ಸವಾಲು, ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಹಲವು ನಿರ್ಣಯಗಳನ್ನು ಅಂಗೀಕರಿಸಲಾಗುವುದು. ಸುತ್ತೂರುಶ್ರೀ, ಸಿದ್ಧಗಂಗಾಶ್ರೀ, ಗುರು–ವಿರಕ್ತರು ಸೇರಿದಂತೆ ಎಲ್ಲ ಮಠಾಧೀಶರನ್ನು ಆಹ್ವಾನಿಸಲಾಗುವುದು’ ಎಂದರು.

ADVERTISEMENT

‘‍ಪ್ರತಿ 5 ವರ್ಷಗಳಿಗೊಮ್ಮೆ 3 ದಿನ ಅಧಿವೇಶನ ನಡೆಸಲಾಗುತ್ತಿತ್ತು. ಬರದ ಕಾರಣ ಈ ಬಾರಿ ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಿಳಾ ವಿಚಾರಗೋಷ್ಠಿ, ಯುವ, ರೈತ ಅಧಿವೇಶನ ನಡೆಯಲಿದೆ. ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಉಪಾಧ್ಯಕ್ಷ ಎನ್‌. ತಿಪ್ಪಣ್ಣ, ಅಥಣಿ ವೀರಣ್ಣ ಸೇರಿದಂತೆ ಮಹಾಸಭಾದ ಆಂಧ್ರಪ್ರದೇಶ, ಮಹಾರಾಷ್ಟ್ರದ ಪ್ರತಿನಿಧಿಗಳು, ವಿವಿಧ ಜಿಲ್ಲಾ ಘಟಕಗಳ ಪದಾಧಿಕಾರಿಗಳು, ಸಮುದಾಯದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲಿಂಗಾಯತ ಸಿಎಂ–ಕುರ್ಚಿ ಖಾಲಿ ಇಲ್ಲ: ‘ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಿರುವಾಗ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

‘ಜಾತಿ ಗಣತಿ ವರದಿ ಬಿಡುಗಡೆ ಸಂಬಂಧ ಸಚಿವ ಸಂಪುಟದಲ್ಲಿ ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ಈ ಕುರಿತು ಮತ್ತೊಮ್ಮೆ ಚರ್ಚಿಸಿದಾಗ ನಮ್ಮ ಅಭಿಪ್ರಾಯ ತಿಳಿಸುತ್ತೇವೆ’ ಎಂದರು.

‘ಕಾಂಗ್ರೆಸ್ ಸರ್ಕಾರದಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮದು ಸಮಬಾಳು, ಸಮಪಾಲು ಸರ್ಕಾರ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.