ADVERTISEMENT

ಸಮೂಹಸನ್ನಿಯಂತೆ ಕಾಡುವ ಮಾದಕ ವಸ್ತು: ಎಸ್ಪಿ ರಿಷ್ಯಂತ್

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 5:01 IST
Last Updated 30 ಜೂನ್ 2022, 5:01 IST
ದಾವಣಗೆರೆಯ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವ್ಯಸನ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿದರು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವ್ಯಸನ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ‘ಮಾದಕ ವಸ್ತುಗಳ ಸೇವನೆಯಿಂದ ಒತ್ತಡದಲ್ಲಿರುವ ಮನಸ್ಸನ್ನು ನಿಯಂತ್ರಿಸಬಹುದು ಎಂಬ ತಪ್ಪು ತಿಳುವಳಿಕೆ ಯುವಕರಲ್ಲಿದೆ. ಆದರೆ ಮಾದಕ ವಸ್ತುಗಳ ಸೇವನೆಯಿಂದ ಇಡೀ ಜೀವನವೇ ಹಾಳಾಗುತ್ತದೆ’ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಎಚ್ಚರಿಕೆ ನೀಡಿದರು.

ನಗರದ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವ್ಯಸನ ಹಾಗೂ ಕಳ್ಳಸಾಗಣೆ ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಾದಕ ವಸ್ತುಗಳ ಚಟಗಳು ಯುವಪೀಳಿಗೆಯನ್ನು ಸಾಮೂಹಿಕಸನ್ನಿಯಂತೆ ಕಾಡುತ್ತಿದ್ದು, ಬಹುತೇಕ ಕಾಲೇಜುಗಳಲ್ಲಿ ಸಾಮೂಹಿಕವಾಗಿ ಒಬ್ಬರನ್ನು ನೋಡಿ ಮತ್ತೊಬ್ಬರು ಕಲಿಯುತ್ತಿದ್ದಾರೆ. ಗೆಳೆಯರ ಜೊತೆ ಇರುವವರು ಅವರು ಮಾಡುತ್ತಾರೆ, ನಾವು ಮಾಡದಿದ್ದರೆ ಹೇಗೋ ಏನ್ನುವ ಸಂಕುಚಿತ ಮನೋಭಾವದಿಂದ ಕ್ಷಣಿಕ ಸುಖಕ್ಕಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದರು.

ADVERTISEMENT

‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ದೃಶ್ಯಗಳು ಯುವಪೀಳಿಗೆಯನ್ನು ಹಾಳುಮಾಡುತ್ತಿದ್ದು, ಯಾರೋ ಡ್ರಗ್ಸ್ ಸೇವನೆ ಮಾಡುತ್ತಾರೆ ಎನ್ನುವ ಭರದಲ್ಲಿ ಇಂದಿನ ಯುವಪೀಳಿಗೆ ಅದಕ್ಕೆ ಜೋತು ಬೀಳುತ್ತಿದ್ದಾರೆ. ಇದು ದೊಡ್ಡ ಪಿಡುಗಾಗಿ ಮಾರ್ಪಟ್ಟಿದ್ದು, ಯುವಕರನ್ನು ಸಮಸ್ಯೆಯತ್ತ ದೂಡುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕು’ ಎಂದು ಹೇಳಿದರು.

ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಡಾ.ಎನ್. ಮೃತ್ಯುಂಜಯ ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು.

ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಿ.ಎಸ್. ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ನಿರ್ದೇಶಕ ಡಾ. ಅರುಣ್ ಕುಮಾರ್ ಅಜ್ಜಪ್ಪ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಪಿ.ಡಿ. ಮುರಳೀಧರ, ಜಿಲ್ಲಾ ಮನೋವೈದ್ಯ ಡಾ. ಗಂಗಮ್ ಸಿದ್ಧಾರೆಡ್ಡಿ, ಅಬಕಾರಿ ಇಲಾಖೆಯ ಉಪ ಆಯುಕ್ತ ಬಿ.ಶಿವಪ್ರಸಾದ್, ಸಿ.ಜಿ. ಆಸ್ಪತ್ರೆಯ ಮನೋವೈದ್ಯ ಡಾ.ಕೆ. ಮರಳುಸಿದ್ಧಪ್ಪ ಇದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.