ADVERTISEMENT

ದಾವಣಗೆರೆ: ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿ ನೇಮಕ ವಜಾಕ್ಕೆ ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 11:32 IST
Last Updated 26 ಜೂನ್ 2020, 11:32 IST
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್   

ದಾವಣಗೆರೆ: ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿರುವ ಆದೇಶ ವಜಾಗೊಳಿಸಿ, ಅಧ್ಯಕ್ಷ, ಉಪಾಧ್ಯಕ್ಷರನ್ನು ಮುಂದುವರಿಸಬೇಕು ಎಂದು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿದೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ರಾಜ್ಯ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್‌ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿರುವ ಸರ್ಕಾರದ ಕ್ರಮ ಸರಿಯಲ್ಲ. ಆಡಳಿತಾಧಿಕಾರಿಗಳನ್ನು ನೇಮಿಸಿದರೆ ಭ್ರಷ್ಟಾಚಾರಕ್ಕೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಇದರಿಂದ ಜನರಿಗೂ ಅನಾನುಕೂಲ’ ಎಂದು ದೂರಿದರು.

ಆದೇಶ ಹಿಂಪಡೆಯುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿ ಪರಿಗಣಿಸದ ಕಾರಣ ಆದೇಶದ ವಿರುದ್ಧ ಹೊನ್ನಾಳಿ ತಾಲ್ಲೂಕಿನ 9 ಪಂಚಾಯಿತಿಗಳು ಹೈಕೋರ್ಟ್‌ ಮೊರೆ ಹೋಗಿವೆ ಎಂದರು.

ADVERTISEMENT

ವೇದಿಕೆ ರಾಜ್ಯಾಧ್ಯಕ್ಷ ಎ. ಉಮೇಶ್, ‘ಚುನಾವಣೆ ಮುಂದೂಡಲು ಸಚಿವ ಸಂಪುಟಕ್ಕೆ ಅಧಿಕಾರ ಇಲ್ಲ. ಈ ಸಂಬಂಧ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಪ್ರಕರಣ ಅಡಿ ಕಲಂ 321ನ್ನು ಜೊತೆಯಾಗಿ ಓದಿಕೊಂಡು ಆಡಳಿತಾಧಿಕಾರಿ ನೇಮಿಸಿ ಎಂದು ಸೂಚಿಸಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆ. ಇದೇ ಅಂಶವನ್ನು ಹೈಕೋರ್ಟ್‌ ಗಮನಕ್ಕೆ ತಂದಿದ್ದೇವೆ’ ಎಂದರು.

ಶೀಘ್ರ ಪ್ರಕರಣದ ವಿಚಾರಣೆ ನಡೆಸಲಿದೆ. ಚಿತ್ರದುರ್ಗ ಹಾಗೂ ಇನ್ನು ಕೆಲ ಗ್ರಾಮ ಪಂಚಾಯಿತಿಗಳ ಮೂಲಕ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.

ವೇದಿಕೆಯ ರಾಜ್ಯ ಖಜಾಂಚಿ ಪ್ರಸನ್ನಕುಮಾರ್‌, ಎಚ್‌. ಕಡದಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಬೀರಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಬಸವನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.