
ದಾವಣಗೆರೆ: ಮಾಸಿಕ ₹ 15,000 ಗೌರವಧನ ನಿಗದಿಪಡಿಸಬೇಕು ಹಾಗೂ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಇಡುಗಂಟು ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಯದೇವ ವೃತ್ತದಲ್ಲಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಟಿಯುಸಿ) ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಅಲ್ಲಿಂದ ಮೆರವಣಿಗೆ ಹೊರಟರು. ಉಪವಿಭಾಗಾಧಿಕಾರಿ ಕಚೇರಿ ತಲುಪಿ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.
ಆಶಾ ಕಾರ್ಯಕರ್ತೆಯರ ಗೌರವಧನ ₹ 5,000ದಿಂದ ₹ 8,000ಕ್ಕೆ ಏರಿಕೆ ಮಾಡುವುದಾಗಿ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿತ್ತು. ಆದರೆ, ಅದು ಈವರೆಗೂ ಅನುಷ್ಠಾನಕ್ಕೆ ಬಂದಿಲ್ಲ. 2025ರ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಮಾತ್ರ ಏರಿಕೆ ಮಾಡಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಪ್ರೋತ್ಸಾಹಧನ ಕೆಲಸಕ್ಕೆ ಅನುಗುಣವಾಗಿ ಸಿಗುತ್ತಿಲ್ಲ. ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಪ್ರೋತ್ಸಾಹ ಧನ ಕೂಡ ಬಿಡುಗಡೆ ಮಾಡಿಲ್ಲ. ಕೇಂದ್ರದ ಮಾರ್ಗಸೂಚಿ ಉಲ್ಲಂಘಿಸಿ ಆಶಾ ಕಾರ್ಯಕರ್ತೆಯರನ್ನು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಸೇವೆಯಿಂದ ಕೈಬಿಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಗೌರವಾಧ್ಯಕ್ಷ ಮಂಜುನಾಥ್ ಕುಕ್ಕುವಾಡ, ಜಿಲ್ಲಾ ಘಟಕದ ಅಧ್ಯಕ್ಷೆ ಲಲಿತಮ್ಮ, ಪದಾಧಿಕಾರಿಗಳಾದ ಇಂದಿರಾ, ಲೀಲಾವತಿ ಬಿದರಕೆರೆ, ರೂಪಾ ಕೊಂಡದಳ್ಳಿ, ಅಂಜಲಿ ಸೇವಾನಗರ ಹಾಜರಿದ್ದರು.
ನೇಮಕಾತಿಗೆ ಒತ್ತಾಯಿಸಿ ಪ್ರತಿಭಟನೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ 78 ಸಚಿವಾಲಯಗಳಲ್ಲಿ 9.29 ಲಕ್ಷ ಹುದ್ದೆ ಹಾಗೂ ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇವೆ. ಉದ್ಯೋಗಾಕಾಂಕ್ಷಿಗಳು ನೇಮಕಾತಿ ಪ್ರಕ್ರಿಯೆಗೆ ಕಾಯುತ್ತಿದ್ದಾರೆ. ಬ್ಯಾಂಕ್ ರೈಲ್ವೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಗುತ್ತಿಗೆ ಆಧಾರಿತ ನೇಮಕಾತಿ ಹೆಚ್ಚುತ್ತಿದೆ. ಇದನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು. ಎಐಡಿವೈಒ ಜಿಲ್ಲಾ ಘಟಕದ ಅನಿಲ್‌ಕುಮಾರ್ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.