ದಾವಣಗೆರೆ: ‘ರಾಜ್ಯದಲ್ಲಿ ಸಂಭವಿಸಿದ ಭೀಕರ ಬರಗಾಲ ಮತ್ತು ಅಂತರ್ಜಲ ಮಟ್ಟ ಕುಸಿತದಿಂದ ರೈತರು ಕಂಗಾಲಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಮಾಡಬೇಕು’ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಒತ್ತಾಯಿಸಿದರು.
ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಸಭಾಪತಿಯವರು ಮಾತನಾಡಲು ಅವಕಾಶ ಮಾಡಿಕೊಟ್ಟ ಸಂದರ್ಭ ಪ್ರಸ್ತುತ ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದರು.
‘ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ₹72 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಬರಗಾಲದಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಅಡಿಕೆ, ತೆಂಗು, ಬಾಳೆ ಬೆಳೆಗಾರರು, ಬೆಳೆ ಉಳಿಸಿಕೊಳ್ಳಲು ಭಗೀರಥ ಯತ್ನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲನ್ನಾ ಮಾಡಬೇಕು. ಹಾಗೂ ಬರ ಪರಿಹಾರದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.
‘ರಾಜ್ಯದ ಸಂಸದರು, ವಿರೋಧ ಪಕ್ಷದ ನಾಯಕರು ಈ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದು ಸಲಹೆ ನೀಡಿದರು.
‘ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದು, ಇದನ್ನು ಸಹಿಸದ ವಿರೋಧ ಪಕ್ಷದವರು ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಹೇಳಿ ರೈತರನ್ನು ಮತ್ತು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿತ್ತಿದ್ದಾರೆ’ ಎಂದರು.
‘ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಮನೆಗೊಂದು ನಳ ಅಳವಡಿಸಲಾಗಿದ್ದು, ನೀರು ಸಂಗ್ರಹಿಸಲು ಮಹಿಳೆಯರು ಕೂಲಿ ಬಿಟ್ಟು ಇಡೀ ದಿವಸ ನಿಲ್ಲುವ ಪರಿಸ್ಥಿತಿ ಬಂದಿದೆ. ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಮೇಲೆ ಜನರಿಗೆ ಉಪಯೋಗ ಆಗಬೇಕು. ಅದರಿಂದ ಇನ್ನಷ್ಟು ಸಮಸ್ಯೆಗಳು ಆಗಬಾರದು’ ಎಂದು ಸಮಸ್ಯೆಗಳನ್ನು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.