ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಹಾಗೂ ರೈತ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದರು
-ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ
ದಾವಣಗೆರೆ: ಭದ್ರಾ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಜಮಾಯಿಸಿದ ಪ್ರತಿಭಟನಕಾರರು ಅರ್ಧ ಗಂಟೆಗೂ ಹೆಚ್ಚು ಹೊತ್ತು ಧರಣಿ ನಡೆಸಿದರು. ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ಭದ್ರಾ ನೀರು ನಮ್ಮ ಹಕ್ಕು’, ‘ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸಿ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದರು. ಇದನ್ನು ತಡೆಯಲು ಮುಂದಾದ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಹೆದ್ದಾರಿಯಲ್ಲೇ ಧರಣಿ ಕುಳಿತು ವಾಹನ ಸಂಚಾರ ತಡೆದರು. ಬಳಿಕ ಪೊಲೀಸರು ಎಲ್ಲರನ್ನೂ ಬಂಧಿಸಿದರು. ಈ ವೇಳೆ ರೈತ ಮುಖಂಡ ನಾಗೇಶ್ವರ ರಾವ್ ಅಸ್ವಸ್ಥಗೊಂಡರು.
‘ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತಾಸಕ್ತಿ ಕಾಪಾಡಲು ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಟಖೆಯನ್ನು ದುರ್ಬಳಕೆ ಮಾಡಿಕೊಂಡಿದೆ. ನಾಲೆ ಸೀಳಿ ಭದ್ರಾ ನೀರು ಪೂರೈಕೆ ಮಾಡಲು ಅಚ್ಚುಕಟ್ಟು ಪ್ರದೇಶದ ರೈತರು ಅವಕಾಶ ನೀಡುವುದಿಲ್ಲ. ಲಜ್ಜೆಗಟ್ಟ ಸರ್ಕಾರಕ್ಕೆ ಬುದ್ದಿಕಲಿಸಲು ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಬಸವರಾಜ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಜಿಲ್ಲಾ ರೈತ ಒಕ್ಕೂಟದ ಮುಖಂಡ ಕೋಳೆನಹಳ್ಳಿ ಬಿ.ಎಂ. ಸತೀಶ್, ಬಿಜೆಪಿ ಮುಖಂಡರಾದ ಲೋಕಿಕೆರೆ ನಾಗರಾಜ್, ಧನಂಜಯ ಕಡ್ಲೆಬಾಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.