ದಾವಣಗೆರೆ: ಕಾರ್ಲ್ ಮಾರ್ಕ್ಸ್ ನಗರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಆರೋಪಿಸಿದರು.
‘ಕೈತಪ್ಪಿದ ಅಧಿಕಾರವನ್ನು ಮರಳಿ ಹಿಡಿಯಲು ಬಿಜೆಪಿ ಗೊಂದಲಗಳನ್ನು ಸೃಷ್ಟಿಸುತ್ತಿದೆ. ‘ಐ ಲವ್ ಮೊಹಮ್ಮದ್’ ಫ್ಲೆಕ್ಸ್ ವಿಚಾರವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ. ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
‘ಕೋಮು ಸಾಮರಸ್ಯ ಕದಡುವವರ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ. ಗಲಾಟೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಎರಡು ಕೋಮಿನ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೊಬ್ಬರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.
‘1992ರಲ್ಲಿ ನಗರದಲ್ಲಿ ನಡೆದ ಕಹಿ ಘಟನೆಯಿಂದ ಜನರು ಸಂಕಷ್ಟ ಅನುಭವಿಸಿದ್ದಾರೆ. ವ್ಯಾಪಾರ, ವಹಿವಾಟು ನಡೆಯದೇ ತೊಂದರೆ ಅನುಭವಿಸಿದ್ದಾರೆ. ಇಂತಹ ಘಟನೆಗಳು ಮರುಕಳುಹಿಸಬಾರದು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬೆಳೆ ಕೂಡ ಸಮೃದ್ಧವಾಗಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಯಾರೊಬ್ಬರೂ ಮಾಡಬಾರದು’ ಎಂದರು.
ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾ ಬಾಯಿ, ಮುಖಂಡರಾದ ಕೆ.ಜಿ.ಶಿವಕುಮಾರ್, ಎ.ನಾಗರಾಜ್, ಅಯೂಬ್ ಪೈಲ್ವಾನ್, ಮಂಗಳಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.