
ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಬದಲಾವಣೆ ಮಾಡುವಂತೆ ದೆಹಲಿ ವರಿಷ್ಠರನ್ನು ಕೋರಲು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ನೇತೃತ್ವದ ಬಣ ಮುಂದಾಗಿದೆ.
ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಹಲವರ ಜೊತೆಗೆ ಸಮಾಲೋಚನೆ ನಡೆಸಿದ ಜಿಲ್ಲೆಯ 20ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಪಟ್ಟು ಸಡಿಲಿಸದಿರಲು ತೀರ್ಮಾನಿಸಿದ್ದಾರೆ.
‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಪ್ರಮುಖ ನಾಯಕರೇ ಕಾರಣ. ಇದರಿಂದ ಪಕ್ಷಕ್ಕೆ ನಷ್ಟ ಉಂಟಾಗಿದೆ. ಎಂ.ಪಿ. ರೇಣುಕಾಚಾರ್ಯ ಹಾಗೂ ಇತರರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳಿವೆ. ಪಕ್ಷದ ಕೇಂದ್ರ ಶಿಸ್ತು ಸಮಿತಿ ಷೋಕಾಸ್ ನೋಟಿಸ್ ನೀಡಿದರೂ ಕ್ರಮ ಕೈಗೊಂಡಿಲ್ಲ. ಈ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು’ ಎಂದು ಮೂಲಗಳು ಮಾಹಿತಿ ನೀಡಿವೆ.
‘ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಣದ ಜೊತೆಗೆ ಗುರುತಿಸಿಕೊಂಡಿದ್ದಾರೆ. ಪಕ್ಷದ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರನ್ನು ಬದಲಾವಣೆ ಮಾಡುವಂತೆ ಈ ಹಿಂದೆಯೇ ಕೋರಿಕೊಳ್ಳಲಾಗಿತ್ತು’ ಎಂದು ಮುಖಂಡರೊಬ್ಬರು ವಿವರಿಸಿದರು.
ಹರಿಹರದ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ವೀರೇಶ್ ಹನಗವಾಡಿ, ಮುಖಂಡರಾದ ಬಿ.ಎಸ್. ಜಗದೀಶ್, ಎ.ಬಿ. ಹನುಮಂತಪ್ಪ, ಶಾಂತರಾಜ ಪಾಟೀಲ, ಲಿಂಗರಾಜ್ ಸೇರಿ ಅನೇಕರು ಸಭೆಯಲ್ಲಿದ್ದರು.
ಹೊಂದಾಣಿಕೆ ಅಸಾಧ್ಯ: ಸಿದ್ದೇಶ್ವರ
‘ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದೂ ಸೇರಿದಂತೆ ಬಣದ ಬೇಡಿಕೆಗಳಿಗೆ ಸ್ಪಂದಿಸುವವರೆಗೆ ಹೊಂದಾಣಿಕೆ ಅಸಾಧ್ಯ’ ಎಂಬುದನ್ನು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
‘ಕೋರ್ ಕಮಿಟಿ ಸಭೆಗೆ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಭೇಟಿಯಾಗಿ ಚರ್ಚಿಸಿದ್ದರು. ನನ್ನ ನಿಲುವನ್ನು ಅವರಿಗೆ ಸ್ಪಷ್ಟಪಡಿಸಿದ್ದೇನೆ. ಅದರಾಚೆಗೆ ಯಾವುದೇ ಮಾತುಕತೆ, ಹೊಂದಾಣಿಕೆ ನಡೆದಿಲ್ಲ. ಬಣದಲ್ಲಿ ಭಿನ್ನಮತ ಮೂಡಿಸಲು ಕೆಲವರು ವದಂತಿ ಹಬ್ಬಿಸಿದ್ದಾರೆ ಎಂಬುದನ್ನು ಸಿದ್ದೇಶ್ವರ ವಿವರಿಸಿದರು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.