ADVERTISEMENT

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಅಮಾಯಕರ ಸಾವಿಗೆ ಸರ್ಕಾರವೇ ಹೊಣೆ: ಲೋಕಿಕೆರೆ ನಾಗರಾಜ್

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 16:09 IST
Last Updated 6 ಜೂನ್ 2025, 16:09 IST
ದಾವಣಗೆರೆಯ ವಿದ್ಯಾರ್ಥಿ ಭವನ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು
ದಾವಣಗೆರೆಯ ವಿದ್ಯಾರ್ಥಿ ಭವನ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು   

ದಾವಣಗೆರೆ: ಬೆಂಗಳೂರಿನಲ್ಲಿ ಈಚೆಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಘಟಕದ ಮುಖಂಡರು ಇಲ್ಲಿನ ವಿದ್ಯಾರ್ಥಿ ಭವನ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಆರ್‌ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭ್ರಮಾಚರಣೆಗೆ ಸೇರಿದ್ದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಮೃತಪಟ್ಟಿದ್ದಾರೆ. ಅವರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಮಂಗಳವಾರ ತಡರಾತ್ರಿ ಪಂದ್ಯ ಮುಗಿದಿದೆ. ಬುಧವಾರವೇ ತರಾತುರಿಯಲ್ಲಿ ಸಂಭ್ರಮಾಚರಣೆ ಸಮಾರಂಭ ಆಯೋಜಿಸುವ ಅಗತ್ಯ ಏನಿತ್ತು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಪ್ರಶ್ನಿಸಿದರು.

‘ಪೂರ್ವ ತಯಾರಿ ಇಲ್ಲದ ಕಾರಣ ಪೊಲೀಸರು ಸಂಭ್ರಮಾಚರಣೆಗೆ ಅನುಮತಿ ನೀಡಿರಲಿಲ್ಲ. ಆದರೂ, ರಾಜ್ಯ ಸರ್ಕಾರ ಹಠಕ್ಕೆ ಬಿದ್ದವರಂತೆ ಕಾರ್ಯಕ್ರಮ ಆಯೋಜಿಸಿ ಅಮಾಯಕರ ಪ್ರಾಣ ತೆಗೆದಿದೆ’ ಎಂದು ಆರೋಪಿಸಿದರು.

ADVERTISEMENT

‘ರಾಜ್ಯ ಪೊಲೀಸ್ ಇಲಾಖೆಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದಲೇ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. 11 ಅಭಿಮಾನಿಗಳ ಸಾವಿನ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ’ ಎಂದು ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ್ ಆಗ್ರಹಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್‌ಕುಮಾರ್ ನಾಯಕ್, ಐರಣಿ ಅಣ್ಣೇಶ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಬಾತಿ ಶಿವಕುಮಾರ್, ಪಂಜು ಪೈಲ್ವಾನ್, ಪ್ರವೀಣ್ ಜಾಧವ್, ಕೊಟ್ರೇಶ್ ಗೌಡ, ರಾಜು, ಕೆ.ಎನ್. ವೆಂಕಟೇಶ್, ಸಂತೋಷ್ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.