ADVERTISEMENT

ದಾವಣಗೆರೆ | ಭದ್ರಾ ನಾಲೆ ಸೀಳುವುದಕ್ಕೆ ವಿರೋಧ

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್‌ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 15:43 IST
Last Updated 23 ಜೂನ್ 2025, 15:43 IST
ಭದ್ರಾ ಬಲದಂಡೆ ನಾಲೆ ಸೀಳುವುದನ್ನು ವಿರೋಧಿಸಿ ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು - ಪ್ರಜಾವಾಣಿ ಚಿತ್ರ
ಭದ್ರಾ ಬಲದಂಡೆ ನಾಲೆ ಸೀಳುವುದನ್ನು ವಿರೋಧಿಸಿ ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು - ಪ್ರಜಾವಾಣಿ ಚಿತ್ರ   

ದಾವಣಗೆರೆ: ಭದ್ರಾ ಜಲಾಶಯದ ಸಮೀಪದ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.ಪಿ. ಹರೀಶ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.

ಕುಡಿಯುವ ನೀರಿನ ಕಾಮಗಾರಿಗೆ ವಿರೋಧವಿಲ್ಲ. ಆದರೆ, ಭದ್ರಾ ನಾಲೆಯನ್ನು ಸೀಳಿ ನೀರು ಕೊಂಡೊಯ್ಯಲು ಬಿಡುವುದಿಲ್ಲ. ಕುಡಿಯುವ ಉದ್ದೇಶಕ್ಕೆ ನದಿ ಮೂಲದಿಂದ ನೀರು ಕೊಂಡೊಯ್ಯಲು ಅವಕಾಶವಿದೆ. ಕೃಷಿಗೆ ಮೀಸಲಾಗಿರುವ ನೀರನ್ನು ಅನ್ಯ ಉದ್ದೇಶಕ್ಕೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ನಾಲೆಯಿಂದ 30 ಕ್ಯೂಸೆಕ್‌ ನೀರನ್ನು ಕುಡಿಯುವ ಉದ್ದೇಶಕ್ಕೆ ಹರಿಸುವ ಈ ಯೋಜನೆಯನ್ನು ರಾಜ್ಯ ಸರ್ಕಾರ ಗೋಪ್ಯವಾಗಿ ಅನುಷ್ಠಾನಕ್ಕೆ ತರುತ್ತಿದೆ. ಭದ್ರಾ ನಾಲಾ ವ್ಯಾಪ್ತಿಯ ಶಾಸಕರ ಸಭೆ ನಡೆಸುವ ಬದಲು ಹೊಸದುರ್ಗ ಹಾಗೂ ತರೀಕೆರೆ ಶಾಸಕರ ಸಭೆಯನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಕರೆಯುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.

ಭದ್ರಾ ನಾಲೆಯ ವ್ಯಾಪ್ತಿಯ ಹೊನ್ನಾಳಿ, ಹರಪನಹಳ್ಳಿ, ದಾವಣಗೆರೆ, ಚನ್ನಗಿರಿ ತಾಲ್ಲೂಕಿನ ಕೊನೆಯ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ. ಕಳೆದ 20 ವರ್ಷಗಳಿಂದ ಕೊನೆ ಭಾಗದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ 30 ಕ್ಯೂಸೆಕ್ ನೀರನ್ನು ಕೊಂಡೊಯ್ಯಲು ಅನುಮತಿ ನೀಡಿದ್ದು ಸರಿಯಲ್ಲ. ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಾಡಿದ ಅನ್ಯಾಯವಿದು ಎಂದು ಕಿಡಿಕಾರಿದರು.

ಬಿಜೆಪಿ ಮುಖಂಡರಾದ ಹನಗವಾಡಿ ವೀರೇಶ್, ಯಶವಂತರಾವ್‌ ಜಾಧವ್, ಎನ್.ಇ. ಜೀವನಮೂರ್ತಿ, ಬಿ.ಎಸ್. ಜಗದೀಶ್, ಶ್ರೀನಿವಾಸ ದಾಸಕರಿಯಪ್ಪ, ರಾಜನಹಳ್ಳಿ ಶಿವಕುಮಾರ್, ದೇವರಮನಿ ಶಿವಕುಮಾರ್, ಎ.ವೈ. ಪ್ರಕಾಶ್, ಅಣ್ಣೇಶ್ ಕೊಮ್ಮಾರನಹಳ್ಳಿ ಹಾಜರಿದ್ದರು.

ಕುಡಿಯುವ ನೀರಿಗೆ ವಿರೋಧವಿಲ್ಲ ನಾಲೆಯ ನೀರು ಕೊಂಡೊಯ್ಯಲು ಬಿಡುವುದಿಲ್ಲ ನದಿ ಮೂಲದ ನೀರು ಪೂರೈಕೆಗೆ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.