
ದಾವಣಗೆರೆ: ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೊಶ ವ್ಯಕ್ತಪಡಿಸಿದರು. ಪ್ರಕರಣವನ್ನು ಕೂಡಲೇ ರದ್ಧಪಡಿಸಬೇಕು ಎಂದು ಒತ್ತಾಯಿಸಿದರು.
ನಗರದ ಕೆಇಬಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಮೆರವಣಿಗೆ ಹೊರಟರು. ಹದಡಿ ರಸ್ತೆ, ವಿದ್ಯಾರ್ಥಿ ಭವನ ವೃತ್ತದ ಮೂಲಕ ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. ಠಾಣೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ತಡೆದರು.
ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಠಾಣೆಗೆ ತೆರಳಿದ ಬಿಜೆಪಿ ನಿಯೋಗ ಪ್ರಕರಣ ರದ್ದುಪಡಿಸಲು ಒತ್ತಾಯಿಸಿತು. ಶಾಸಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲು ಸಾಕ್ಷ್ಯ ಏನಿದೆ ಎಂದು ಪ್ರಶ್ನಿಸಲಾಯಿತು. ಡಿವೈಎಸ್‌ಪಿ ಬಿ.ಎಸ್. ಬಸವರಾಜ್ ಹಾಗೂ ಶರಣ ಬಸವೇಶ್ವರ ಅವರೊಂದಿಗೆ ಏರು ಧ್ವನಿಯಲ್ಲಿ ಚರ್ಚೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.
‘ಶಾಸಕರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಜಾತಿ ನಿಂದನೆ ಪ್ರಕರಣ ಸಿಆರ್‌ಇಸಿ ಠಾಣೆ ವ್ಯಾಪ್ತಿಗೆ ಬರುತ್ತದೆ. ಇದಕ್ಕೆ ಪ್ರತ್ಯೇಕ ಪೊಲೀಸ್ ವರಿಷ್ಠಾಧಿಕಾರಿ ಇದ್ದಾರೆ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ಡಿವೈಎಸ್‌ಪಿ ಬಸವರಾಜ್ ಅವರು ಬಿಜೆಪಿ ನಿಯೋಗಕ್ಕೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು.
ಇದರಿಂದ ಆಕ್ರೋಶಗೊಂಡ ಶಾಸಕ ಬಿ.ಪಿ. ಹರೀಶ್, ‘ಮಣ್ಣು ಅಕ್ರಮ ಸಾಗಣೆ ಮಾಡಿದ ಸ್ಥಳ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಬರುತ್ತದೆ. ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸರ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ. ದಾಖಲೆ ಸಮೇತ ದೂರು ನೀಡಿದರೂ ಪ್ರಕರಣ ದಾಖಲಿಸಿಲ್ಲ’ ಎಂದು ಆರೋಪಿಸಿದರು.
‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಣ್ಣು ಅಕ್ರಮ ಸಾಗಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳಿವೆ. ಇದನ್ನು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದರೂ ಕಾನೂನು ಕ್ರಮ ಕೈಗೊಂಡಿಲ್ಲ. ಇದಕ್ಕೆ ಪೊಲೀಸ್ ಇಲಾಖೆಯ ಉತ್ತರ ಪಡೆಯದೇ ತೆರಳುವುದಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರಬೇಕು’ ಎಂದು ಪಟ್ಟುಹಿಡಿದರು. ಸಚಿವರ ವಿರುದ್ಧ ಏಕವಚನದಲ್ಲಿ ಆಕ್ರೋಶ ಹೊರಹಾಕಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ಸ್ಥಳಕ್ಕೆ ಧಾವಿಸಿ ಬಿಜೆಪಿ ಮುಖಂಡರ ಮನವೊಲಿಸಲು ಪ್ರಯತ್ನಿಸಿದರು. ಪಟ್ಟು ಸಡಿಲಿಸದ ಪ್ರತಿಭಟನಕಾರರು ಠಾಣೆಯಿಂದ ಹೊರನಡೆದು ಧರಣಿ ಮುಂದುವರಿಸಿದರು. ಎಸ್‌ಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಧಾವಿಸಿ ಚರ್ಚಿಸಿ ದೂರು ಸ್ವೀಕರಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ, ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಹನಗವಾಡಿ ವೀರೇಶ್, ಲೋಕಿಕೆರೆ ನಾಗರಾಜ್, ಬಿ.ಜೆ. ಅಜಯ್‌ಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.