ADVERTISEMENT

ಬಜೆಟ್ ಅನುದಾನ; ಕೇಂದ್ರದಿಂದ ಮಲತಾಯಿ ಧೋರಣೆ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 15:56 IST
Last Updated 26 ಜನವರಿ 2026, 15:56 IST
   

ದಾವಣಗೆರೆ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಚುನಾವಣೆ ಎದುರಾಗಲಿರುವ ರಾಜ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಆರೋಪಿಸಿದರು.

‘2025–26ನೇ ಸಾಲಿನ ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಕೊಡುಗೆಗಳು ಸಿಕ್ಕಿದ್ದವು. ಫೆಬ್ರುವರಿಯಲ್ಲಿ ಮಂಡನೆಯಾಗಲಿರುವ ಬಜೆಟ್‌ನಲ್ಲಿ ಚುನಾವಣೆ ಎದುರಾಗಲಿರುವ ರಾಜ್ಯಗಳಿಗೆ ಈ ಕೊಡುಗೆಗಳು ಸಿಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಚುನಾವಣೆಯ ಮೇಲೆ ಕಣ್ಣಿಟ್ಟು ಅನುದಾನ ಹಂಚಿಕೆ ಮಾಡುವ ವಿಧಾನವನ್ನು ಕೈಬಿಡಬೇಕು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ದೇಶದ ಜಿಡಿಪಿಗೆ ಕೊಡುಗೆ ನೀಡುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಇದಕ್ಕೆ ಅನುಗುಣವಾಗಿ ಕೇಂದ್ರ ಅನುದಾನ ಒದಗಿಸುತ್ತಿಲ್ಲ. ಇದರಿಂದ ರಾಜ್ಯದ ಅಭಿವೃದ್ಧಿಗೆ ತೊಂದರೆ ಉಂಟಾಗುತ್ತಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯದ ಬಗ್ಗೆ ಕಾಳಜಿ ತೋರುತ್ತಿಲ್ಲ. ಇದರಿಂದ ಪ್ರತಿ ವರ್ಷ ರಾಜ್ಯ ₹ 20,000 ಕೋಟಿ ಕಳೆದುಕೊಳ್ಳುತ್ತಿದೆ’ ಎಂದು ದೂರಿದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಗುರು ಎಂಬಂತೆ ಬಿಂಬಿಸಿಕೊಂಡಿದ್ದಾರೆ. ಆದರೆ, ವಿದೇಶಾಂಗ ವ್ಯವಹಾರದಲ್ಲಿ ಸತತವಾಗಿ ಎಡವುತ್ತಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತದ ವಿದೇಶಾಂಗ ವ್ಯವಹಾರ ನಿಯಂತ್ರಿಸುತ್ತಿದ್ದಾರೆ’ ಎಂದು ದೂರಿದರು.

ಜಿಲ್ಲೆಯ ಅಭಿವೃದ್ಧಿಗೆ ಹಲವು ಪ್ರಸ್ತಾವಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ನೀರಾವರಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಆದ್ಯತೆ ನೀಡಲಾಗುವುದು
ಎಸ್‌.ಎಸ್‌. ಮಲ್ಲಿಕಾರ್ಜುನ್‌, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.