ಕಲುಷಿತ ನೀರು
ಚನ್ನಗಿರಿ: ತಾಲ್ಲೂಕಿನ ಜೋಳದಹಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 17 ಜನರು ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ 12 ಜನರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಈ ಗ್ರಾಮದ ಒಂದು ಓಣಿಯ ಕೆಲವು ನಿವಾಸಿಗಳು ಬುಧವಾರ ತಡರಾತ್ರಿ ಅಸ್ವಸ್ಥತೊಂಡಿದ್ದರು. ಏಕಕಾಲಕ್ಕೆ ಎಲ್ಲರಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಲವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ, ಇನ್ನು ಕೆಲವರು ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
‘ಅಸ್ವಸ್ಥರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ನಿಗಾ ಇರಿಸಿದ್ದಾರೆ. ಗ್ರಾಮದಲ್ಲಿ ವೈದ್ಯಕೀಯ ತಂಡ ಬೀಡುಬಿಟ್ಟಿದ್ದು, ಸರ್ಕಾರಿ ಶಾಲೆಯ ಆವರಣದಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆಯಲಾಗಿದೆ. ಅಸ್ವಸ್ಥತೆಗೆ ಕಲುಷಿತ ನೀರು ಅಥವಾ ಆಹಾರ ಕಾರಣವೇ ಎಂಬುದು ದೃಢಪಟ್ಟಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಷಣ್ಮುಖಪ್ಪ ತಿಳಿಸಿದ್ದಾರೆ.
‘ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಾಗಿ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ. ಶುದ್ಧ ಕುಡಿಯುವ ನೀರು ಪೂರೈಸಲು ಸೂಚಿಸಲಾಗಿದೆ’ ಎಂದು ಗ್ರಾಮಕ್ಕೆ ಭೇಟಿ ನೀಡಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ ತಿಳಿಸಿದರು.
‘ಗ್ರಾಮದ ಚರಂಡಿಗಳಲ್ಲಿ ನಲ್ಲಿಗಳನ್ನು ಅಳವಡಿಸಲಾಗಿದೆ. ಚರಂಡಿ ನೀರು ಪೈಪ್‌ಗಳಲ್ಲಿ ಸೇರಿಕೊಂಡು ಕುಡಿಯುವ ನೀರು ಕಲುಷಿತಗೊಳ್ಳುತ್ತಿದೆ. ಅದನ್ನು ಕುಡಿದ ಪರಿಣಾಮ ನಾವು ಅಸ್ವಸ್ಥರಾಗಿದ್ದೇವೆ’ ಎಂದು ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಹಾಗೂ ಕವಿತಾ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.