ಮೇಳನಾಯಕನಕಟ್ಟೆ (ಚನ್ನಗಿರಿ): ‘ಜಲಜೀವನ್ ಮಿಷನ್ ಅಡಿ ಕ್ಷೇತ್ರದ 25 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಗುರಿಯನ್ನು ಹೊಂದಲಾಗಿದ್ದು, ಮೊದಲ ಹಂತದಲ್ಲಿ ಮೇಳನಾಯಕನಕಟ್ಟೆ ಹಾಗೂ ತಿಳಿನೀರಕಟ್ಟೆ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಪ್ರಾರಂಭಿಸಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
ತಾಲ್ಲೂಕಿನ ಮೇಳನಾಯಕನಕಟ್ಟೆ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಇಲಾಖೆಯಿಂದ ಮಂಗಳವಾರ ಜಲಜೀವನ್ ಮಿಷನ್ ಅಡಿ ಕುಡಿಯುವ ನೀರು ಸರಬರಾಜು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ಈ ಎರಡು ಗ್ರಾಮಗಳಿಗೆ ದಿನಪೂರ್ತಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಗ್ರಾಮಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಮುಂದಿನ ಆರು ತಿಂಗಳು ಅಚ್ಚುಕಟ್ಟಾಗಿ ನಿರ್ವಹಿಸಿದರೆ ಇನ್ನೂ ಹೆಚ್ಚಿನ ಅನುದಾನ ನೀಡಲಾಗುತ್ತದೆ. ₹1.5 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು’ ಎಂದರು.
‘ಬಗರ್ ಹುಕುಂ ಯೋಜನೆ ಅಡಿ ನಮೂನೆ 50 ಹಾಗೂ 53ರಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇನ್ನು ಮೂರು ತಿಂಗಳಲ್ಲಿ ಸಾಗುವಳಿ ಪತ್ರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಕ್ಕುಪತ್ರ ನೀಡಲು 8 ತಿಂಗಳು ಸಮಯಾವಕಾಶ ಬೇಕಾಗುತ್ತದೆ’ ಎಂದು ಹೇಳಿದರು.
‘ಜಲಜೀವನ್ ಮಿಷನ್ ಅಡಿಯಲ್ಲಿ ಜಿಲ್ಲೆಯ 100 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ ಜಿಲ್ಲೆಯ 7 ಗ್ರಾಮಗಳಲ್ಲಿ ಸರಬರಾಜು ಆರಂಭಿಸಲಾಗಿದೆ. ಪ್ರತಿ ವ್ಯಕ್ತಿಗೆ ದಿನಕ್ಕೆ 55 ಲೀಟರ್‌ನಂತೆ ನೀರು ಪೂರೈಸಲಾಗುವುದು. ಕುಡಿಯುವ ನೀರು ಸರಬರಾಜು ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ತಿಳಿಸಿದರು.
ಹಿರೇಮಳಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ಸಂತೋಷ್, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಲೋಹಿತ್ ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಾಂತ್, ಮೂಡಲಗಿರಿಯಪ್ಪ, ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.