ಚನ್ನಗಿರಿ: ರಸಗೊಬ್ಬರ ಬೆಲೆ ಏರಿಕೆ ಹಾಗೂ ಯೂರಿಯಾ ಗೊಬ್ಬರ ಕೊರತೆ ಉಂಟಾಗಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್) ಬಣದವರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನಾದ್ಯಂತ ಮೆಕ್ಕೆಜೋಳ, ರಾಗಿ ಇನ್ನಿತರ ಬೆಳೆಗಳಿಗೆ ಅಗತ್ಯವಿರುವ ಯೂರಿಯಾ ರಸಗೊಬ್ಬರಕ್ಕಾಗಿ ಖಾಸಗಿ ಅಂಗಡಿಗಳಿಗೆ ರೈತರು ಮುಗಿಬೀಳುತ್ತಿದ್ದಾರೆ. ವಾರದಿಂದ ತಾಲ್ಲೂಕಿನಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಸಕಾಲದಲ್ಲಿ ಯೂರಿಯಾ ಗೊಬ್ಬರ ಸಿಗುತ್ತಿಲ್ಲ. ಖಾಸಗಿ ರಸಗೊಬ್ಬರ ಮಾರಾಟಗಾರರು ಕೃತಕ ಅಭಾವವನ್ನು ಸೃಷ್ಟಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಅಗತ್ಯವಾದ ಯೂರಿಯಾ ಗೊಬ್ಬರವನ್ನು ಪೂರೈಸಬೇಕು ಎಂದು ಪ್ರತಿಭಟನಕಾರರು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಗಾಂಧಿ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಾಗಿ ತಹಶೀಲ್ದಾರ್ ಕಚೇರಿ ವರೆಗೆ ಸಾಗಿತು. ತಹಶೀಲ್ದಾರ್ ಎನ್.ಜೆ. ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಆರ್. ರವಿಕುಮಾರ್, ಡಿ.ಆರ್. ಹನುಮಂತಪ್ಪ, ಪಿ. ಪ್ರಭಾಕರ್, ಜ್ಞಾನೇಶ್, ಆಂಜನೇಯ, ಕೋಗಲೂರು ಕುಮಾರ್, ಪೀರಾನಾಯ್ಕ, ಉಮೇಶ್, ಮೂಡಲಗಿರಿಯಪ್ಪ, ಹೇಮಾಬಾಯಿ, ಜ್ಯೋತಿ ಬಾಯಿ, ಬಸಣ್ಣ, ತಿಮ್ಮಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.