ADVERTISEMENT

ಜಗಳೂರು: ಭದ್ರಾ ಮೇಲ್ದಂಡೆಯಿಂದ ಕೆರೆ ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ

ಬದಲಾಗಲಿದೆ ಮಧ್ಯ ಕರ್ನಾಟಕದ ಭವಿಷ್ಯ:ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 10:03 IST
Last Updated 29 ಏಪ್ರಿಲ್ 2022, 10:03 IST
ಜಗಳೂರು: ಭದ್ರಾ ಮೇಲ್ದಂಡೆಯಿಂದ ಕೆರೆ ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಜಗಳೂರು: ಭದ್ರಾ ಮೇಲ್ದಂಡೆಯಿಂದ ಕೆರೆ ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ   

ಜಗಳೂರು: ನೀರಾವರಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಿದ್ದು, ನಮ್ಮ ಸರ್ಕಾರದಿಂದ ಕರ್ನಾಟಕದ ಭವಿಷ್ಯ ಬದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯಿಂದ ಜಗಳೂರಿನ 9 ಕೆರೆ ತುಂಬಿಸುವ ಹಾಗೂ 18,423 ಹೆಕ್ಟೇರ್‌ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಕಲ್ಪಿಸುವ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ಹಿಂದಿನ ಎಲ್ಲಾ ಪಕ್ಷಗಳ ಸರ್ಕಾರಗಳು ಮಧ್ಯ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದವು. ಬರೀ ಘೋಷಣೆಗಳನ್ನು ಮಾಡಿ, ವೋಟ್‌ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದವು. ನಮ್ಮ ಸರ್ಕಾರಕ್ಕೆ ಮಧ್ಯಕರ್ನಾಟಕದ ಬಗ್ಗೆ ವಿಶೇಷ ಕಳಕಳಿ ಇದೆ ಎಂದರು.

ADVERTISEMENT

ರೈತರು ಬೆಳೆದ ಉತ್ಪನ್ನಗಳಿಗೆ ಒಳ್ಳೆಯ ಬೆಲೆ ಸಿಗಬೇಕು ಹಾಗೂ ಈ ಭಾಗದ ಜನರ ಕೈಗೆ ಕೆಲಸ ಸಿಗಬೇಕು ಎಂದು ನೀರಾವರಿ ಹಾಗೂ ಕೈಗಾರಿಕೆಗೆ ಒತ್ತು ಕೊಟ್ಟಿದ್ದೇವೆ. ಮುಂಬೈ-ಚೆನ್ನೈ ಕೈಗಾರಿಕಾ ಕಾರಿಡಾರ್ ಮೂಲಕ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕರ್ನಾಟಕಕ್ಕೆ ಭವ್ಯ ಭವಿಷ್ಯವನ್ನು ಕಲ್ಪಿಸಿಕೊತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಲು ಪ್ರಧಾನಿ ನರೇಂದ್ರ ಮೋದಿ ವಿಶೇಷ ಆಸಕ್ತಿ ತೋರಿಸುತ್ತಿದ್ದಾರೆ. ಮುಂಬರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಗಲಿದೆ. ₹ 16 ಸಾವಿರ ಕೋಟಿ ಅನುದಾನ ಸಿಗಲಿದೆ. ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ 337 ಕೆರೆ ತುಂಬಿಸಲು ಸಾಧ್ಯವಾಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರಂಭಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಯನ್ಮು ಪ್ರಧಾನಿ ಮೋದಿ ಪೂರ್ಣಗೊಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವ ಬೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.