ADVERTISEMENT

ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಪ್ಪಿಸಿ

ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 4:38 IST
Last Updated 12 ಜುಲೈ 2025, 4:38 IST
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಗಣ್ಯರು ಸಸಿಗೆ ನೀರೆರೆದು ಉದ್ಘಾಟಿಸಿದರು
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಗಣ್ಯರು ಸಸಿಗೆ ನೀರೆರೆದು ಉದ್ಘಾಟಿಸಿದರು   

ದಾವಣಗೆರೆ: ‘ಸಮಾಜದಲ್ಲಿ ನಡೆಯುತ್ತಿರುವ ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯವು ಮಾನವೀಯ ಮೌಲ್ಯಗಳ ಮೇಲಿನ ಕ್ರೌರ್ಯವಾಗಿದೆ. ಹೀಗಾಗಿ ಇವುಗಳನ್ನು ತಪ್ಪಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಜೊತೆಗೂಡಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಬಾಲ್ಯವಿವಾಹ ನಿಷೇಧ ಅಧಿಕಾರ ಮತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ – 2012ರ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ಇತ್ತೀಚೆಗೆ ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೊ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು. 

ADVERTISEMENT

‘ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಗ್ರಾಮೀಣ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಅವರ ಅರಿವಿಗೆ ಬಾರದೇ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಲಾಗುವುದು ಎಚ್ಚರಿಕೆ ನೀಡಿದರು.

‘ಬಾಲ್ಯವಿವಾಹವು ಸಾಮಾಜಿಕ ಪಿಡುಗು. ಇಂತಹ ಪದ್ಧತಿಯನ್ನು ಸಂಪೂರ್ಣವಾಗಿ ತೊಲಗಿಸಲು ಅಧಿಕಾರಿಗಳು ಪಣತೊಡಬೇಕು. ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದೆ. ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಹಲವಾರು ಕಾಯ್ದೆಗಳನ್ನು ರೂಪಿಸಿದೆ. ಆದರೂ, ಇಂದಿಗೂ ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಕರೆಣ್ಣವರ್ ಬೇಸರ ವ್ಯಕ್ತಪಡಿಸಿದರು.

‘ಇಂತಹ ಪ್ರಕರಣಗಳು ಹೀಗೆ ಮುಂದುವರಿದಲ್ಲಿ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಎಲ್ಲರೂ ಭವಿಷ್ಯದ ಬಗ್ಗೆ ಚಿಂತಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸರ್ಕಾರವು ತಮೆಗೆಲ್ಲಾ ಒಂದು ಜವಾಬ್ದಾರಿಯುತ ಸ್ಥಾನಮಾನ ನೀಡಿದೆ. ಅದಕ್ಕೆ ತಕ್ಕಂತೆ ಪ್ರತಿಯೊಬ್ಬರೂ ಸಮನ್ವಯತೆಯಿಂದ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.