ADVERTISEMENT

ಬಾಲ್ಯ ವಿವಾಹ ತಡೆ ಎಲ್ಲರ ಜವಾಬ್ದಾರಿ: ಮಹಾಂತೇಶ ಬೀಳಗಿ

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಲಹೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 16:24 IST
Last Updated 23 ಜನವರಿ 2020, 16:24 IST
ದಾವಣಗೆರೆಯ ಎಸ್ಪಿ ಕಚೇರಿಯಲ್ಲಿ ಗುರುವಾರ ನಡೆದ ಬಾಲ್ಯ ವಿವಾಹ ನಿಷೇದ ಕಾಯ್ದೆ ಹಾಗೂ ಜೆ.ಜೆ ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇದ್ದರು.
ದಾವಣಗೆರೆಯ ಎಸ್ಪಿ ಕಚೇರಿಯಲ್ಲಿ ಗುರುವಾರ ನಡೆದ ಬಾಲ್ಯ ವಿವಾಹ ನಿಷೇದ ಕಾಯ್ದೆ ಹಾಗೂ ಜೆ.ಜೆ ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇದ್ದರು.   

ದಾವಣಗೆರೆ: ಬಾಲ್ಯ ವಿವಾಹ ನಿಷೇಧ ಇದ್ದರೂ ಅಲ್ಲಲ್ಲಿ ನಡೆಯುತ್ತಿರುವುದು ಕಳವಳಕಾರಿ. ಬಾಲ್ಯ ವಿವಾಹ ತಡೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಜೆಜೆ ಕಾಯ್ದೆ–2015ರ ಕುರಿತು ಪೊಲೀಸ್‌ ಸಿಬ್ಬಂದಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಬಾಲ್ಯ ವಿವಾಹ ಕಂಡು ಬಂದರೆ ತಕ್ಷಣ ಸಹಾಯವಾಣಿಗೆ ತಿಳಿಸಬೇಕು. ಎಲ್ಲರೂ ಕರ್ತವ್ಯ ಪ್ರಜ್ಞೆ ಮೆರೆಯಬೇಕು.ಇತ್ತೀಚಿಗೆ ನಗರದಲ್ಲಿ ಮಗು ಮಾರಾಟ ಪ್ರಕರಣ ಬೆಳಕಿಗೆ ಬಂದಿರುವುದು ಕಳವಳಕಾರಿ. ಪ್ರಕರಣ ಸಂಬಂಧ ಆಸ್ಪತ್ರೆ ಸಿಬ್ಬಂದಿ ಸೇರಿ ಸಂಬಂಧಿಸಿದ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಬೇಕು. ಆಗ ಬೇರೆಯವರಿಗೂ ಈ ಬಗ್ಗೆ ಎಚ್ಚರಿಕೆ ರವಾನಿಸಿದಂತಾಗುತ್ತದೆ ಎಂದು ಹೇಳಿದರು.

ADVERTISEMENT

ಬಡತನಕ್ಕಾಗಿ ಮಕ್ಕಳ ಮಾರಾಟ ನಡೆಯುತ್ತಿರುವುದು ನೋವಿನ ಸಂಗತಿ. ಬಡತನ ಶಾಪವಲ್ಲ. ಇದು ಜೀವನದಲ್ಲಿ ಅನೇಕ ಪಾಠ ಕಲಿಸುತ್ತದೆ ಎಂದ ಅವರು, ‘ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದರೆ ಕೂಡಲೇ ಸಂಬಂಧಪಟ್ಟವರಿಗೆ ತಿಳಿಸಿ. ಎಲ್ಲರೂ ಜಿಲ್ಲೆಯಲ್ಲಿ ಪ್ರಕರಣ ನಡೆಯದಂತೆ ತಡೆಯೋಣ’ ಎಂದು ಕರೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಂತರಾಯ, ‘ಮುಂಬರುವ ದಿನಗಳಲ್ಲಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸ್ನೇಹಿ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಪ್ರತಿದಿನ 300ಕ್ಕೂ ಹೆಚ್ಚು ಜನರು ಭೇಟಿ ನೀಡುತ್ತಾರೆ. ಅವರಿಗೆ ಶೌಚಾಲಯ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ದೂರು ನೀಡಲು ಬರುವ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಲು ಮಹಿಳಾ ಸ್ನೇಹಿ ವಾತಾವರಣಕ್ಕೆ ಆದ್ಯತೆ ನೀಡಲಾಗುವುದು. ಮಹಿಳೆಯರು, ಪುರುಷರಿಗೆ ಪ್ರತ್ಯೇಕ ಶೌಚಾಲಯ, ಮಹಿಳಾ ವಿಶ್ರಾಂತಿ ಕೊಠಡಿ, ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಜಲಗಾರ್, ‘ಜೆಜೆ ಕಾಯ್ದೆ–2015 ತಿದ್ದುಪಡಿಯಲ್ಲ. ನವೀಕೃತ ಕಾಯ್ದೆ. ನಿರ್ಭಯಾ ಪ್ರಕರಣದಲ್ಲಿ ಬಾಲಪರಾಧಿ ಸಂಬಂಧ ನಡೆದ ವ್ಯಾಪಕ ಚರ್ಚೆ ಬಳಿಕ ಕಾಯ್ದೆಯನ್ನು ನವೀಕೃತಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಬಾಲ್ಯ ವಿವಾಹ, ಬಾಲ ಅಪರಾಧ ವೇಳೆ ಅನುಸರಿಸಬೇಕಾದ ಕ್ರಮಗಳು, ಬಾಲ ನ್ಯಾಯ ವ್ಯವಸ್ಥೆಗಳು, ಪೋಷಣೆ ಮತ್ತು ರಕ್ಷಣೆ ಬೇಕಾದ ಮಕ್ಕಳು, ಮಕ್ಕಳ ನ್ಯಾಯ ಮಂಡಳಿ, ಮಕ್ಕಳ ಪ್ರಕರಣ ನಿರ್ವಹಣೆಯಲ್ಲಿ ಗಮನಿಸಬೇಕಾದ ದಾಖಲೆಗಳು ಸೇರಿ ಹಲವು ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಎಚ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮಾನಾಯ್ಕ್ ವೈ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಸವರಾಜಯ್ಯ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.