ADVERTISEMENT

5ರಿಂದ ಅಂಗನಾಡಿ ಕಾರ್ಯಕರ್ತೆಯರ ಧರಣಿ

ವಿವಿಧ ಬೇಡಿಕೆಗಳಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 11:43 IST
Last Updated 2 ಜುಲೈ 2019, 11:43 IST

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಎರಡು ಹಂತಗಳಲ್ಲಿ ಹೋರಾಟ ನಡೆಸಲು ನಿರ್ಧರಿಸಿದೆ ಎಂದು ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಜುಲೈ 5 ಮತ್ತು 6ರಂದು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಹಗಲು–ರಾತ್ರಿ ಚಳವಳಿ ನಡೆಸಿ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜುಲೈ 6ರಂದು ಬಹಿರಂಗ ಸಭೆ ನಡೆಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ದಾವಣಗೆರೆಯಲ್ಲಿ 5ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಲಾಗುವುದು’ ಎಂದು ಹೇಳಿದರು.

‘ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ನಿವೃತ್ತರಾಗುವ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ₹6ಸಾವಿರ ಪಿಂಚಣಿ ನೀಡಬೇಕು. ಮುಂಬರುವ ಬಜೆಟ್‌ನಲ್ಲಿ ತಪ್ಪದೇ ಜಾರಿಗೆ ತರಬೇಕು ಎಂದು ಆಗ್ರಹಿಸಿ ಜುಲೈ 30 ಹಾಗೂ 31ರಂದು ಎರಡು ದಿವಸ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಚಳವಳಿ ನಡೆಸಲಾಗುವುದು’ ಎಂದರು.

ADVERTISEMENT

‘ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಇಂಗ್ಲಿಷ್‌ ಮಾಧ್ಯಮಶಾಲೆ ತೆರೆದು ಸೌಲಭ್ಯ ಕಲ್ಪಿಸಿಕೊಡಬೇಕು. ಅಂಗನವಾಡಿ ಕೇಂದ್ರಗಳನ್ನು ಇಂಗ್ಲಿಷ್ ಕಾನ್ವೆಂಟ್‌, ನರ್ಸರಿ ಸ್ಕೂಲ್‌ಗಳಾಗಿ ಪರಿವರ್ತಿಸಿ 2 ವರ್ಷದ ಮಕ್ಕಳನ್ನು ಸೇರಿಸಿಕೊಳ್ಳಲು ಆದೇಶ ಹೊರಡಿಸಬೇಕು. ರಾಜ್ಯ ಸರ್ಕಾರ ಹೊಸದಾಗಿ ಆರಂಭಿಸಿರುವ ಪಬ್ಲಿಕ್‌ ಶಾಲೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು

ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಟಿನ ಹಣ ₹50 ಸಾವಿರ ಮತ್ತು ಸಹಾಯಕಿಯರಿಗೆ ₹30 ಸಾವಿರ ನೀಡಬೇಕು. ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರಿಗೆ ಎನ್‌ಪಿಎಸ್ ಹಣ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಫೆಡರೇಷನ್ ರಾಜ್ಯ ಖಜಾಂಚಿ ಎಂ.ಬಿ. ಶಾರದಮ್ಮ, ಫೆಡರೇಷನ್‌ನ ಮಲ್ಲಮ್ಮ, ವಿಶಾಲಾಕ್ಷಿ, ರೇಣುಕಮ್ಮ, ಲೀಲಮ್ಮ, ಕಾಳಮ್ಮ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.