ದಾವಣಗೆರೆ: ಭದ್ರಾ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯ ವಿಚಾರದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅನುಮತಿ ನೀಡಲಾಗಿದೆ. ಪ್ರಚಾರಕ್ಕಾಗಿ ಭ್ರಷ್ಟ ಬಿಜೆಪಿ ನಾಯಕರು ಹೋರಾಟ ನಡೆಸುತ್ತಿದ್ದಾರೆ. ಬಂದ್‌ಗೆ ಸಾರ್ವಜನಿಕರು ಬೆಂಬಲ ನೀಡಿಲ್ಲ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.
‘ಬಿಜೆಪಿ ಮುಖಂಡರು ಜನರಿಗೆ ತಪ್ಪು ಮಾಹಿತಿ ನೀಡುವ ಬದಲು, ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಬರಲಿ. ಬಂದ್ ಮೂಲಕ ಸಾರ್ವಜನಿಕರು, ವರ್ತಕರಿಗೆ ತೊಂದರೆ ಕೊಡುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಜಿಲ್ಲೆಯ ಕಾಂಗ್ರೆಸ್ ನಾಯಕರು ರೈತರ ಹಿತ ಕಾಪಾಡಲು ಬದ್ಧ’ ಎಂದು ತಿಳಿಸಿದರು.
‘2022ರಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಯೋಜನೆಗೆ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದರು. ಆಗ ಎಂ.ಪಿ.ರೇಣುಕಾಚಾರ್ಯ ಎಲ್ಲಿ ಹೋಗಿದ್ದರು. ಸಮಸ್ಯೆ ಬಗೆಹರಿಸುವ ಉದ್ದೇಶ ಬಿಜೆಪಿಗಿಲ್ಲ. ಕಾಮಗಾರಿಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ಆದರೂ, ಬಿಜೆಪಿ ಬಂದ್‌ಗೆ ಕರೆ ನೀಡುವ ಮೂಲಕ ದುಡಿಯುವ ವರ್ಗಕ್ಕೆ ಅನ್ಯಾಯ ಎಸಗುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಮುದೇಗೌಡ್ರ ಗಿರೀಶ್ ಹೇಳಿದರು.
ಧೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ, ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಆಯೂಬ್ ಪೈಲ್ವಾನ್, ಎ.ನಾಗರಾಜ್, ಗಡಿಗುಡಾಳ್ ಮಂಜುನಾಥ್, ಕೆ.ಜಿ.ಶಿವಕುಮಾರ್ ಸೇರಿದಂತೆ ಇನ್ನಿತರ ಮುಖಂಡರು, ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಬಿಜೆಪಿ ನಾಯಕರ ವಿರುದ್ಧ ಘೋಷಣೆ ಬಿಜೆಪಿ ಅವಧಿಯಲ್ಲೇ ಯೋಜನೆಗೆ ಅನುಮತಿ ಆದೇಶದ ಪ್ರತಿ ಹಿಡಿದರು ಆಕ್ರೋಶ
ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ ಪ್ರತಿಭಟನೆ ನಂತರ ನಗರದಲ್ಲಿರುವ ಬಿಜೆಪಿ ಜಿಲ್ಲಾ ಘಟಕದ ಕಚೇರಿಗೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಯೋಜನೆಗೆ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದ ಆದೇಶದ ಪ್ರತಿಯನ್ನು ಹಿಡಿದು ಸಾಗಿದ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು. ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ತಡೆದರು. ರಸ್ತೆಯಲ್ಲಿಯೇ ಕುಳಿತು ಪ್ರತಿಭಟಿಸಿದ ಮುಖಂಡರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಕಾರರನ್ನು ವಾಹನದಲ್ಲಿ ಕರೆದುಕೊಂಡು ಹೋದ ಪೊಲೀಸರು ಡಿಎಆರ್ ಮೈದಾನದ ಬಳಿ ಬಿಟ್ಟರು.
ಕಾಮಗಾರಿ ಸ್ಥಗಿತಕ್ಕೆ ಶಾಸಕ ಮನವಿ ದಾವಣಗೆರೆ: ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಗೊಳಿಸಿ ಭದ್ರಾ ಅಚ್ಚುಕಟ್ಟು ಪ್ರದೇಶದ ಹಿನ್ನೀರು ಪ್ರದೇಶ ಅಥವಾ ಬೇರೆ ಮಾರ್ಗದಿಂದ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ಬಲದಂಡೆಯನ್ನು ಸೀಳಿದರೆ ಕಾಲುವೆಯ ನೀರಿನ ಸಹಜ ಹರಿವಿಗೆ ಅಡ್ಡಿಯಾಗಲಿದೆ. ಆರಂಭಂದಲ್ಲಿಯೇ ನೀರಿನ ಹರಿವಿನ ವೇಗ ಕಡಿಮೆ ಆದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ದಾವಣಗೆರೆ ಹೊನ್ನಾಳಿ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕೊನೆಯ ಭಾಗದವರೆಗೆ ನೀರು ಸರಾಗವಾಗಿ ಹರಿಯುವುದಿಲ್ಲ’ ಎಂದು ಶಾಸಕರು ಮನವರಿಕೆ ಮಾಡಿದ್ದಾರೆ. ‘ಕೂಡಲೇ ಆ ಭಾಗದ ಸಚಿವರು ಶಾಸಕರು ರೈತ ಮುಖಂಡರೊಂದಿಗೆ ಸಭೆ ನಡೆಸಲು ಜಲಸಂಪನ್ಮೂಲ ಸಚಿವರಿಗೆ ಸೂಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಯಕೊಂಡದ ರೈತ ಮುಖಂಡರಾದ ರಾಮಗೊಂಡನಹಳ್ಳಿ ಶರಣಪ್ಪ ಮಲ್ಲಿಕಾರ್ಜುನ್ ಅತ್ತಿಗೆರೆ ಮಹಾದೇವಪ್ಪ ಬಾಡದ ರವಿ ಸೇರಿದಂತೆ ಇನ್ನಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.