
ಹರಿಹರ: ‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗಲಿ ಎಂಬ ಕಾರಣಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ಮೆಚ್ಚಿಸಲು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ಶಾಸಕ ಬಿ.ಪಿ.ಹರೀಶ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ ದೂರಿದರು.
‘ಹರಿಹರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಶಾಸಕ ಎಸ್.ರಾಮಪ್ಪ ಹಾಗೂ ನಂದಿಗಾವಿ ಶ್ರೀನಿವಾಸ್ ನಡುಗೆ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ತಮ್ಮ ಪಕ್ಷದ ಮುಖಂಡರನ್ನು ಮೆಚ್ಚಿಸಲು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ. ಹರೀಶ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಕ್ಷೇತ್ರದ ಅಭಿವೃದ್ಧಿಗೆ ಹರೀಶ್ ಏನೂ ಮಾಡಿಲ್ಲ ಎಂದು ಆರೋಪಿಸುವ ಶ್ರೀನಿವಾಸ್ ಅವರು, ತಮ್ಮ ಸರ್ಕಾರದಿಂದ ಎರಡೂವರೆ ವರ್ಷದಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗ ಮಾಡಲಿ’ ಎಂದರು.
ರಾಮಪ್ಪ ಅವರು ಜಿ.ಎಂ.ಸಿದ್ದೇಶ್ವರ ವಿರುದ್ಧ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ನೈತಿಕತೆ ಇದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
‘ತಾಲೂಕಿನಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಹೇಳುವ ಕಾಂಗ್ರೆಸ್ ಮುಖಂಡರು ಕೈಗೊಳ್ಳಬೇಕಾದ ಕೆಲಸಗಳ ಪಟ್ಟಿ ಮಾಡಲಿ. ಬಿಜೆಪಿ ನಿಯೋಗ ನಿಮ್ಮೊಂದಿಗೆ ಬರಲು ಸಿದ್ಧವಾಗಿದೆ. ದಿನಾಂಕವನ್ನು ನೀವು ನಿಗದಿಪಡಿಸಿ. ಆಗದಿದ್ದರೆ ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲ ಎಂಬುದು ಸಾರ್ವಜನಿಕರಿಗೆ ಸ್ಪಷ್ಟವಾಗುತ್ತದೆ’ ಎಂದು ಪಕ್ಷದ ಗ್ರಾಮಾಂತರ ಘಟಕ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ ಹೇಳಿದರು.
ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಪ್ರಧಾನ ಕಾರ್ಯದರ್ಶಿ ತುಳುಜಪ್ಪ ಭೂತೆ, ನಗರಸಭೆ ಸದಸ್ಯ ಆಟೊ ಹನುಮಂತಪ್ಪ, ಮುಖಂಡರಾದ ಮಂಜಾನಾಯ್ಕ್, ಮಹಾಂತೇಶ್, ವೀರೇಶ್ ಆದಾಪುರ, ರಮೇಶ್, ಸಂತೋಷ್ ಗುಡಿಮನಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.