ADVERTISEMENT

Lok Sabha Elections 2024 | ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 9:33 IST
Last Updated 3 ಫೆಬ್ರುವರಿ 2024, 9:33 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ದಾವಣಗೆರೆ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲಿಯೇ ಸಿದ್ಧಪಡಿಸಿ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಮ್ಮೇಳನಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಯಾರಿಗೂ ಟಿಕೆಟ್ ಕೇಳಬೇಡಿ ಎಂದು ಹೇಳಲು ಆಗುವುದಿಲ್ಲ. ಅಂತಿಮವಾಗಿ ಆಯಾ ಲೋಕಸಭಾ ಕ್ಷೇತ್ರದಲ್ಲಿ ಬರುವ ಮುಖಂಡರು, ಶಾಸಕರು, ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನಿಗೆ ಟಿಕೆಟ್ ಕೊಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರೂ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕೇಳಲಿ ಬಿಡಿ ಎಂದರು.

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಎಂಬ ಗುತ್ತಿಗೆದಾರರ ಆರೋಪಕ್ಕೆ ಪ್ರತಿಕ್ರಿಯಿಸಿ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದರು.

ಕಾಗಿನೆಲೆ ಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದ ಸ್ವಾಮೀಜಿ ಅವರು ಭೇಟಿ ನೀಡಿದ ಬಳಿಕ ಬಾಗೂರು ಚನ್ನಕೇಶವ ದೇವಸ್ಥಾನ ಶುಚಿಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ ಈ ವಿಷಯ ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದು ಪ್ರತಿಕ್ರಿಯಿಸಿದರು.

ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ 'ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆ. ಆದರೆ ಇದಕ್ಕೆ ಮನ್ನಣೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಕಾಂಗ್ರೆಸ್ ಹಿರಿಯ ಮುಖಂಡ ಸೈಯ್ಯದ್ ಸೈಫುಲ್ಲಾ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.