ADVERTISEMENT

ಖಾಸಗಿ ಆಸ್ಪತ್ರೆಗೆ ಶಿಫಾರಸಾದರೆ ಕೋವಿಡ್ ರೋಗಿಗಳ ವೆಚ್ಚ ಪಾವತಿ: ಜಿಲ್ಲಾಧಿಕಾರಿ

ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 3:14 IST
Last Updated 20 ಸೆಪ್ಟೆಂಬರ್ 2020, 3:14 IST
ಮಹಾಂತೇಶ ಬೀಳಗಿ
ಮಹಾಂತೇಶ ಬೀಳಗಿ   

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವ ಕೋವಿಡ್ ರೋಗಿಗಳಿಗೆ ಸರ್ಕಾರದ ಎಬಿಎಆರ್‌ಕೆ ಯೋಜನೆಯಡಿ ವೈದ್ಯಕಿಯ ವೆಚ್ಚ ಭರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಡಳಿತ ಭವನದಲ್ಲಿ ಶನಿವಾರ ಏರ್ಪಡಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ೨೮೭೪ ಸಕ್ರಿಯ ಕೋವಿಡ್ ಪ್ರಕರಣಗಳು ಇವೆ. ಇದರಲ್ಲಿ 1679 ಜನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ, ಉಳಿದವರು ಮನೆಗಳಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ಪ್ರತ್ಯೇಕ ವ್ಯವಸ್ಥೆ ಇರುವವರಿಗೆ ಮಾತ್ರ ಮನೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ಆದಷ್ಟೂ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‌ಗಳಲ್ಲಿಯೇ ದಾಖಲಾಗುವಂತೆ ಶಿಫಾರಸು ಮಾಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 37 ಜನ ಐಸಿಯುನಲ್ಲಿ ಹಾಗೂ 16 ಜನ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

‘ದಿನಕ್ಕೆ ಸುಮಾರು 800 ಮಾದರಿಗಳ ಪರೀಕ್ಷೆ ಮಾಡುತ್ತಿದ್ದೇವೆ. ಮುಂದೆ ದಿನಕ್ಕೆ ಕನಿಷ್ಟ 2500 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದೆ ಎಂದರು.

ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳು ವಿರುಪಾಕ್ಷಪ್ಪ ಮಾತನಾಡಿ, ‘ರೈತರು, ಬಡವರು ಕೋವಿಡ್ ಕಾರಣಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದಲ್ಲಿ ಅವರಿಗೆ ವೈದ್ಯಕೀಯ ವೆಚ್ಚ ಭರಿಸಲು ತೊಂದರೆಯಾಗುತ್ತಿದೆ. ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಮಾಹಿತಿ ಹಾಗೂ ಚಿಕಿತ್ಸೆ ದೊರಕಿಸಲು ಸಮರ್ಪಕ ವ್ಯವಸ್ಥೆ ಕೈಗೊಳ್ಳಬೇಕು’ ಎಂದರು

ಬೇಗ ಪರೀಕ್ಷಿಸಿಕೊಳ್ಳಿ : ಕೋವಿಡ್ ರೋಗ ಲಕ್ಷಣಗಳು ಕಂಡುಬಂದರೂ ಕೆಲವರು ಭಯದಿಂದ ಅಥವಾ ನಿರ್ಲಕ್ಷ್ಯದಿಂದ ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ. ರೋಗ ತೀವ್ರ ಗಂಭಿರತೆಯನ್ನು ಪಡೆದುಕೊಂಡಾಗ ಪರೀಕ್ಷೆಗೆ ಬರುತ್ತಾರೆ. ಹೀಗಾದಾಗ ಅಂತಹ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟವಾಗಲಿದೆ. ಕೋವಿಡ್ ಕಾರಣದಿಂದ ಮೃತಪಟ್ಟ ಬಹಳಷ್ಟು ಪ್ರಕರಣಗಳಲ್ಲಿ ಈ ರೀತಿಯಾಗಿರುವುದು ಕಂಡುಬಂದಿದೆ. ಹೀಗಾಗಿ ಸಾರ್ವಜನಿಕರು ಜ್ವರ, ನೆಗಡಿ, ಕೆಮ್ಮು ಮುಂತಾದ ರೋಗಲಕ್ಷಣಗಳು ಕಂಡುಬಂದ ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಬೇಗ ರೋಗ ಪತ್ತೆಯಾದಲ್ಲಿ ಬೇಗ ಗುಣಮುಖರಾಗಲು ಅನುಕೂಲ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು, ವೈದ್ಯರು ಕೋವಿಡ್ ನಿರ್ವಹಣೆಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ. ಕೋವಿಡ್ ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಜನರಲ್ಲಿ ಭಯ ನಿವಾರಿಸಬೇಕು’ ಎಂದು ಸಲಹೆ ನೀಡಿದರು.

ಆಸ್ಪತ್ರೆ, ಹಾಸ್ಟೆಲ್, ಅಥವಾ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗಳಲ್ಲಿ ಕೋವಿಡ್ ರೋಗಿಗಳಿಗೆ ಉತ್ತಮ ಗುಣಮಟ್ಟದ ಊಟ, ಉಪಾಹಾರ ಕಲ್ಪಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಈ ವ್ಯವಸ್ಥೆ ಚೆನ್ನಾಗಿದೆ, ಆದರೆ ತಾಲ್ಲೂಕು ಮಟ್ಟದಲ್ಲಿ ಬೇರೆ ಬೇರೆ ರೀತಿಯಾಗಿದೆ. ಒಂದೇ ರೀತಿಯ ಉಪಾಹಾರದ ಮೆನು ತಯಾರಿಸಬೇಕು ಎಂದು ಮಾಡಾಳು ವಿರೂಪಾಕ್ಷಪ್ಪ ಸಲಹೆ ನೀಡಿದರು.

60 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ, ಕೆಲವರು ಇದಕ್ಕೆ ಆಕ್ಷೇಪಿಸುತ್ತಿದ್ದಾರೆ ಎಂದು ಹರಿಹರ ಶಾಸಕ ರಾಮಪ್ಪ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರಪ್ಪ, ಶಾಸಕರಾದ ಎಸ್.ಎ. ರವೀಂದ್ರನಾಥ್, ಶಾಸಕ ಪ್ರೊ. ಲಿಂಗಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಘವೇಂದ್ರಸ್ವಾಮಿ,ಆರೋಗ್ಯ ಇಲಾಖೆಯ ಡಾ. ಗಂಗಾಧರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.