ADVERTISEMENT

ಚನ್ನಗಿರಿ: ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 4:40 IST
Last Updated 10 ಜುಲೈ 2025, 4:40 IST
ಚನ್ನಗಿರಿಯ ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗ್ರಾಮ ಪಂಚಾಯಿತಿ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು
ಚನ್ನಗಿರಿಯ ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗ್ರಾಮ ಪಂಚಾಯಿತಿ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು   

ಚನ್ನಗಿರಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ತಿದ್ದುಪಡಿಯನ್ನು ವಿರೋಧಿಸಿ ಹಾಗೂ ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. 

ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು ಹಾಗೂ ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಮಾಲೀಕರ ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೋರೇಟ್ ಬಂಡವಾಳಶಾಹಿಗಳ ಪರ ರೂಪಿಸಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು. 

ಗ್ರಾಮ ಪಂಚಾಯಿತಿ ನೌಕರರಿಗೆ ₹36,000 ಕನಿಷ್ಠ ವೇತನ, ಪಿಂಚಣಿ ಕನಿಷ್ಠ ₹6,000 ಕ್ಕೆ ನಿಗದಿಪಡಿಸುವುದು, ಎಲ್ಲ ಗ್ರಾಮ ಪಂಚಾಯಿತಿಗಳಿಗೆ ದ್ವಿತೀಯ ದರ್ಜೆ ಗುಮಾಸ್ತರ ನೇಮಕ, ಹಳೆ ಪಿಂಚಣಿ ಯೋಜನೆ ಜಾರಿ, ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಕಾರರು ಒತ್ತಾಯಿಸಿದರು. 

ADVERTISEMENT

ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಹೆದ್ದಾರಿಯಲ್ಲಿ ವಾಹನಗಳನ್ನು ತಡೆಯಲಾಯಿತು. ತಾಲ್ಲೂಕು ಪಂಚಾಯಿತಿ ಕಚೇರಿಗೆ ಆಗಮಿಸಿ ಇಒ ಬಿ.ಕೆ. ಉತ್ತಮ ಅವರಿಗೆ ಮನವಿ ಸಲ್ಲಿಸಿದರು. 

ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಿ. ಶ್ರೀನಿವಾಸ್ ಚಾರ್, ತಾಲ್ಲೂಕು ಘಟಕದ ಅಧ್ಯಕ್ಷ ಪಿ. ಚಂದ್ರಪ್ಪ, ಉಪಾಧ್ಯಕ್ಷ ಪ್ರಸಾದ್, ಕಾರ್ಯದರ್ಶಿ ಜಿ.ಸಿ. ರಾಕೇಶ್, ಕೆ. ಕೆಂಚಪ್ಪ, ಶಿವಯೋಗಿ, ಭಾರತಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.