ದಾವಣಗೆರೆ: ‘ಸಂವಿಧಾನ ಉಳಿಸಿ ಅಭಿಯಾನವು ಜಿಲ್ಲಾ ಹಂತದಲ್ಲಿ ಮುಕ್ತಾಯವಾಗಿದ್ದು, ಪ್ರತೀ ವಿಧಾನಸಭಾ ಕ್ಷೇತ್ರವಾರು ಅಭಿಯಾನವನ್ನು ಶುರು ಮಾಡಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹೇಳಿದರು.
ಇಲ್ಲಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಕಾಂಗ್ರೆಸ್ ಸರ್ಕಾರದ 2ನೇ ವರ್ಷದ ಸಾಧನಾ ಸಮಾವೇಶದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ಕೇಂದ್ರ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ, ಸಿಬಿಐ ಹಾಗೂ ಇನ್ನಿತರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಎಐಸಿಸಿ ನಿರ್ದೇಶನದಂತೆ ಈ ಬಗ್ಗೆ ಜನರ ಮನೆ ಬಾಗಿಲಿಗೆ ಮಾಹಿತಿ ತಲುಪಿಸಬೇಕು’ ಎಂದು ಹೇಳಿದರು.
‘ಬಿಜೆಪಿ ಮುಖಂಡರ ಸಂವಿಧಾನ ವಿರೋಧಿ ನಡೆ ಹಾಗೂ ಅಧಿಕಾರ ದುರ್ಬಳಕೆ ವಿಚಾರಗಳ ಕುರಿತು ಕಾಂಗ್ರೆಸ್ ಜಿಲ್ಲಾ ಘಟಕದಿಂದ ಕರಪತ್ರಗಳನ್ನು ಮುದ್ರಿಸಿ ಮನೆ ಮನೆಗೆ ತಲುಪಿಸಬೇಕು’ ಎಂದರು.
‘ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ ಮೇ 20ರಂದು ಹೊಸಪೇಟೆಯಲ್ಲಿ ನಡೆಯಲಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 1 ಲಕ್ಷ ಬಡವರಿಗೆ ಪಟ್ಟಾ ವಿತರಿಸಲಾಗುತ್ತಿದೆ. ಸರ್ಕಾರದ ಈ ಕಾರ್ಯಕ್ರಮದಲ್ಲಿ ಶಾಸಕರು, ಬ್ಲಾಕ್ ಕಾಂಗ್ರೆಸ್, ವಾರ್ಡ್, ಪಾಲಿಕೆ, ಗ್ರಾಮ ಮಟ್ಟದ ಮುಖಂಡರು, ಕಾರ್ಯಕರ್ತರು ಫಲಾನುಭವಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.
‘ಸಾಧನಾ ಸಮಾವೇಶಕ್ಕೆ ಸರ್ಕಾರದಿಂದ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದಲೂ ಸಿದ್ಧತೆ ನಡೆಯುತ್ತಿವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಬಲ, ವರಿಷ್ಠರಿಗೆ ಶಕ್ತಿ ತುಂಬಬೇಕು’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.
‘ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗಾಗಿ ಕಾರ್ಯಕರ್ತರು ಈಗಿನಿಂದಲೇ ಉತ್ಸಾಹದಿಂದ ಕೆಲಸ ಮಾಡುವುದು ಅವಶ್ಯ’ ಎಂದು ಕೆಪಿಸಿಸಿ ಸದಸ್ಯ ಮುದೇಗೌಡ್ರ ಗಿರೀಶ್ ಹೇಳಿದರು.
ಕೆಪಿಸಿಸಿ ಕಾರ್ಯದರ್ಶಿ ರಾಘವೇಂದ್ರ, ಸದಸ್ಯ ವಡ್ನಾಳ್ ಜಗದೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಶಾಮನೂರು ಬಸವರಾಜ್, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಅನಿತಾಬಾಯಿ ಮಾಲತೇಶ್, ಯುವ ಕಾಂಗ್ರೆಸ್ ಸಮಿತಿಯ ವರುಣ್, ಎಸ್. ಮಲ್ಲಿಕಾರ್ಜುನ್ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಕೋಟ್ಯಂತರ ಜನರು ಉತ್ತಮ ಬದುಕು ರೂಪಿಸಿಕೊಂಡಿದ್ದಾರೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದರೂ ರಾಜಕೀಯ ಲಾಭಕ್ಕಾಗಿ ಅವುಗಳನ್ನು ವಿರೋಧಿಸುತ್ತಿದ್ದಾರೆ–ಕೆಪಿಸಿಸಿ ವಕ್ತಾರ ಡಿ.ಬಸವರಾಜ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.