ADVERTISEMENT

ದಾವಣಗೆರೆ: ₹ 34 ಕೋಟಿ ಅಭಿವೃದ್ಧಿ ಕಾಮಗಾರಿ

ಎರಡು ವರ್ಷಗಳ ‘ಧೂಡಾ’ ಕಾರ್ಯವೈಖರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 6:13 IST
Last Updated 23 ಫೆಬ್ರುವರಿ 2026, 6:13 IST
‘ಧೂಡಾ’ ವತಿಯಿಂದ ದಾವಣಗೆರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಚಾಲನೆ ನೀಡಿದರು
‘ಧೂಡಾ’ ವತಿಯಿಂದ ದಾವಣಗೆರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಚಾಲನೆ ನೀಡಿದರು   

ದಾವಣಗೆರೆ: ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ವತಿಯಿಂದ ಎರಡು ವರ್ಷಗಳಲ್ಲಿ ₹ 34 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಮೆಚ್ಚುಗೆ ವ್ಯಕ್ತಪಡಿಸಿದರು.

‘ಧೂಡಾ’ ವತಿಯಿಂದ ದಾವಣಗೆರೆ ಹಾಗೂ ಹರಿಹರ ನಗರದಲ್ಲಿ ಹಮ್ಮಿಕೊಂಡಿದ್ದ ₹ 2.15 ಕೋಟಿ ವೆಚ್ಚದ ಉದ್ಯಾನ ಮತ್ತು ವೃತ್ತಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಧೂಡಾ’ಗೆ ದಿನೇಶ್‌ ಕೆ.ಶೆಟ್ಟಿ ಅಧ್ಯಕ್ಷರಾದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದೇ ರೀತಿ ಮುಂದಿನ ದಿನಗಳಲ್ಲೂ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕು. ಅವು ಗುಣಮಟ್ಟದಿಂದ ಕೂಡಿರಬೇಕು’ ಎಂದು ಸೂಚಿಸಿದರು.

ADVERTISEMENT

‘ನಗರದಲ್ಲಿ ಉದ್ಯಾನ, ಕುಂದುವಾಡ ಕೆರೆಯ ಏರಿಯ ಮೇಲೆ ಪರಿಸರ ರಕ್ಷಣೆಗೆ ಒತ್ತು ನೀಡಲಾಗಿದೆ. ಉದ್ಯಾನದಲ್ಲಿನ ಕ್ರೀಡೋಪಕರಣಗಳನ್ನು ನಿರ್ವಹಿಸಲು ಕ್ರಮಕೈಗೊಳ್ಳಬೇಕಿದೆ. ಉದ್ಯಾನಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದರು.

ವಿಧಾನಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌, ‘ಧೂಡಾ’ ಅಧ್ಯಕ್ಷ ದಿನೇಶ್‌ ಕೆ.ಶೆಟ್ಟಿ, ಸದಸ್ಯರಾದ ವಾಣಿ ಬಕ್ಕೇಶ್‌, ಜಬ್ಬಾರ್‌ ಖಾನ್‌, ಆಯುಕ್ತ ಹುಲ್ಮನಿ ತಿಮ್ಮಣ್ಣ, ಹರಿಹರ ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್‌ ಹಾಜರಿದ್ದರು.

‘ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ’

‘ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಶ್ರಮಿಸುತ್ತೇವೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ತಿಳಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಕಳೆದ ವರ್ಷ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಗೆಲ್ಲಬೇಕು ಎಂಬುದು ಪಕ್ಷದ ಗುರಿ. ಸಮೀಕ್ಷೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಉತ್ತಮ ಅಭ್ಯರ್ಥಿಗೆ ಅವಕಾಶ ಸಿಗಲಿ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.