ADVERTISEMENT

ದಾವಣಗೆರೆ | ಅಧಿಕಾರಿ, ಜನಪ್ರತಿನಿಧಿ; ಸಮನ್ವಯ ಅಗತ್ಯ ಡಿ.ಆರ್. ಪಾಟೀಲ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 2:38 IST
Last Updated 24 ಜನವರಿ 2026, 2:38 IST
ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ವಿಕೇಂದ್ರಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯನ್ನು ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಉದ್ಘಾಟಿಸಿದರು
ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ವಿಕೇಂದ್ರಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯನ್ನು ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಉದ್ಘಾಟಿಸಿದರು   

ದಾವಣಗೆರೆ: ‘ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ತೇರಿನ ಎರಡು ಚಕ್ರಗಳಿದ್ದಂತೆ. ಇಬ್ಬರ ನಡುವೆ ಸಮನ್ವಯವಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದು ವಿಕೇಂದ್ರೀಕರಣ, ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶುಕ್ರವಾರ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿಗಳು ಸರ್ಕಾರಿ ಕಚೇರಿಗೆ ಸೀಮಿತವಾಗದೇ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರಗಳಾಗಬೇಕು. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಪ್ರತಿಯೊಬ್ಬ ನಾಗರಿಕ ಆಡಳಿತದಲ್ಲಿ ನೇರವಾಗಿ ಪಾಲ್ಗೊಳ್ಳುವುದು ಅನಿವಾರ್ಯ’ ಎಂದು ಪ್ರತಿಪಾದಿಸಿದರು.

ADVERTISEMENT

‘ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯ ಆಶಯದಂತೆ ಗ್ರಾಮಸಭೆಗಳಿಗೆ ಹೆಚ್ಚಿನ ಅಧಿಕಾರವಿದೆ. ಪ್ರತಿಯೊಂದು ಕುಟುಂಬಕ್ಕೂ ಗ್ರಾಮಸಭೆಯ ಜವಾಬ್ದಾರಿ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು. ಪ್ರತಿ ಮನೆಗೂ ಮಾಹಿತಿ ಪತ್ರ ತಲುಪಿಸುವ ಅಭಿಯಾನ ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘2027-28ನೇ ಆರ್ಥಿಕ ವರ್ಷದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜನರ ಅಪೇಕ್ಷೆಗಳಿಗೆ ಆದ್ಯತೆ ನೀಡಬೇಕು. ಆದ್ಯತಾ ವಲಯ ಗುರುತಿಸುವ ಮೂಲಕ ಅಗತ್ಯವಿರುವ ಕಾಮಗಾರಿಗಳನ್ನು ಪಟ್ಟಿ ಮಾಡಿ ಅನುಷ್ಠಾನಕ್ಕೆ ತರಬೇಕು’ ಎಂದರು.

ಗಾಂಧಿ ಗ್ರಾಮ ಸ್ವರಾಜ್ಯ ಬಳಗ:

‘ಪ್ರತಿ ವಾರ್ಡ್‍ಗಳಲ್ಲಿ ಕನಿಷ್ಠ 100 ಸದಸ್ಯರನ್ನು ಒಳಗೊಂಡ ‘ಗಾಂಧಿ ಗ್ರಾಮ ಸ್ವರಾಜ್ಯ ಬಳಗ’ಗಳನ್ನು ರಚಿಸಬೇಕು. ಈ ಬಳಗದಲ್ಲಿ ಗ್ರಾಮದ ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಇರಬೇಕು. ಇದು ಗ್ರಾಮಸಭೆಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸುತ್ತದೆ’ ಎಂದು ಹೇಳಿದರು.

‘ತಿಂಗಳಿಗೆ ಕನಿಷ್ಠ ಒಂದು ದಿನ ಗ್ರಾಮಸ್ಥರೆಲ್ಲರೂ ಸೇರಿ ಶ್ರಮದಾನದ ಮೂಲಕ ಗ್ರಾಮವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಂಕಲ್ಪ ಮಾಡಬೇಕು. ಗ್ರಾಮಗಳು ನಗರದ ಕೊಳಗೇರಿಗಳಂತೆ ಆಗಬಾರದು. ಬದಲಿಗೆ ಸುಂದರ ಮತ್ತು ಆರೋಗ್ಯಕರವಾಗಿರಬೇಕು’ ಎಂದು ಕಿವಿಮಾತು ಹೇಳಿದರು.

‘ಸಾರ್ವಜನಿಕರು ವಿವಿಧ ಇಲಾಖೆಗಳ ಕೆಲಸಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯತಿಗಳೇ ಪ್ರಮುಖ ಕಚೇರಿಯಾಗಿ ಕಾರ್ಯನಿರ್ವಹಿಸಬೇಕು. ಜನರು ಅರ್ಜಿ ಸಲ್ಲಿಸಿದಾಗ ಪಂಚಾಯಿತಿ ಸಿಬ್ಬಂದಿಯೇ ಸಂಬಂಧಪಟ್ಟ ಇಲಾಖೆಗಳಿಂದ ಕೆಲಸ ಮಾಡಿಸಿಕೊಡುವ ವ್ಯವಸ್ಥೆ ಜಾರಿಗೆ ತರಬೇಕು’ ಎಂದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.