ADVERTISEMENT

ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಡಿಸಿ ನಿವಾಸ ನಿರ್ಮಾಣಕ್ಕೆ ವಿರೋಧ

ದಾವಣಗೆರೆ: ಕಾಲೇಜಿನ ಜಾಗ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳಲು ಮನವಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 8:44 IST
Last Updated 25 ಸೆಪ್ಟೆಂಬರ್ 2020, 8:44 IST
ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯ ನಿವಾಸ ನಿರ್ಮಿಸುವುದಕ್ಕೆ ವಿಶ್ವವಿದ್ಯಾಲಯ ದೃಶ್ಯಕಲಾ ಮಹಾವಿದ್ಯಾಲಯ ಸಂರಕ್ಷಣಾ ಹೋರಾಟ ಸಮಿತಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.
ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯ ನಿವಾಸ ನಿರ್ಮಿಸುವುದಕ್ಕೆ ವಿಶ್ವವಿದ್ಯಾಲಯ ದೃಶ್ಯಕಲಾ ಮಹಾವಿದ್ಯಾಲಯ ಸಂರಕ್ಷಣಾ ಹೋರಾಟ ಸಮಿತಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.   

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಜಾಗವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿಡಬೇಕು. ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯ ನಿವಾಸಗಳನ್ನು ಇಲ್ಲಿ ನಿರ್ಮಿಸಬಾರದು ಎಂದು ವಿಶ್ವವಿದ್ಯಾಲಯ ದೃಶ್ಯಕಲಾ ಮಹಾವಿದ್ಯಾಲಯ ಸಂರಕ್ಷಣಾ ಹೋರಾಟ ಸಮಿತಿ ಒತ್ತಾಯಿಸಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಸಮಿತಿಯ ಮುಖಂಡರು, ‘ಶೈಕ್ಷಣಿಕ ಚಟುವಟಿಕೆಗಳಿಗೆ ಮಿಸಲಿಡಬೇಕಾಗಿರುವ ಕಾಲೇಜಿನ ಜಾಗದಲ್ಲಿ ಜಿಲ್ಲಾಧಿಕಾರಿ ನಿವಾಸ ನಿರ್ಮಿಸುವುದನ್ನು ವಿರೋಧಿಸಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಮನವಿಗೆ ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಸಮಿತಿಯ ಮುಖಂಡರಾದ ಎಚ್‌.ಎನ್‌. ಶಿವಕುಮಾರ್‌, ‘1998ರಲ್ಲಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಯ ನಿವಾಸಗಳನ್ನು ನಿರ್ಮಿಸಲು ಮುಂದಾದಾಗ ನಾವು ಹೋರಾಟ ಸಮಿತಿ ರಚಿಸಿಕೊಂಡು ಪ್ರತಿಭಟನೆ ನಡೆಸಿದ್ದೆವು. ಕುವೆಂಪು ವಿಶ್ವವಿದ್ಯಾಲಯದ ಮೂಲಕ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದಾಗ, ಶೈಕ್ಷಣಿಕ ಚಟುವಟಿಕೆಗೇ ಬಳಸಿಕೊಳ್ಳುವಂತೆ ತೀರ್ಪು ನೀಡಿತ್ತು. ಆದರೆ, ಈಗ ಮತ್ತೆ ಇಲ್ಲಿ ನಿವಾಸ ನಿರ್ಮಿಸಲು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ’ ಎಂದು ತಿಳಿಸಿದರು.

ADVERTISEMENT

‘ಸ್ಮಾರ್ಟ್‌ ಸಿಟಿ ಯೋಜನೆಯಡಿ ಇಲ್ಲಿ ಬಯಲು ರಂಗಮಂದಿರ ಹಾಗೂ ಥೀಂ ಪಾರ್ಕ್‌ ನಿರ್ಮಿಸಲು ಉದ್ದೇಶಿಸಲಾಗಿದೆ. ನಿವಾಸ ನಿರ್ಮಿಸಲು ಜಾಗ ನೀಡಿದರೆ ಮುಂಬರುವ ದಿನಗಳಲ್ಲಿ ಇಲ್ಲಿ ಶೈಕ್ಷಣಿಕ ಚಟುವಟಿಕೆ ನಡೆಸಲು ಜಾಗದ ಕೊರತೆಯಾಗಲಿದೆ’ ಎಂದು ಆಕ್ಷೇಪಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಮಾಜಿ ಸದಸ್ಯ ಸಿ.ಎಚ್‌. ಮುರಿಗೇಂದ್ರಪ್ಪ, ‘ಎಲ್ಲರ ಕಣ್ಣು ಇಲ್ಲಿನ ಖಾಲಿ ಜಾಗದ ಮೇಲೆ ಬೀಳುತ್ತಿದೆ. ಇಲ್ಲಿ ನಿವಾಸ ನಿರ್ಮಿಸಲು ಮುಂದಾದರೆ ರಾಜ್ಯದಾದ್ಯಂತ ಇರುವ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಸೇರಿಸಿ ಚಳವಳಿ ನಡೆಸಲಾಗುವುದು. ಅಗತ್ಯ ಬಿದ್ದರೆ ಮತ್ತೆ ನ್ಯಾಯಾಲಯದ ಮೊರೆ ಹೋಗುತ್ತೇವೆ’ ಎಂದು ಎಚ್ಚರಿಸಿದರು.

‘ವಿಶ್ವವಿದ್ಯಾಲಯದ ಕುಲಪತಿ ಕೂಡಲೇ ಸಿಂಡಿಕೇಟ್‌ ಸಭೆ ಕರೆದು ಕಾಲೇಜಿನ ಜಾಗವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ ಎಂದು ನಿರ್ಣಯ ಅಂಗೀಕರಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಬೇಕು’ ಎಂದೂ ಅವರು ಒತ್ತಾಯಿಸಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಮಹಲಿಂಗಪ್ಪ, ‘ಈ ಜಾಗವನ್ನು ಶಿಕ್ಷಣಿಕ ಚಟುವಟಿಕೆಗೆ ಬಳಸಿಕೊಳ್ಳುವಂತೆ ಈ ಹಿಂದೆಯೇ ನ್ಯಾಯಾಲಯದ ತೀರ್ಪು ನೀಡಿದೆ. ಅಂದು ಕುವೆಂಪು ವಿಶ್ವವಿದ್ಯಾಲಯವು ಜಾಗವನ್ನು ಕೊಡುವುದಿಲ್ಲ ಎಂದು ನಿರ್ಧಾರವನ್ನೂ ತೆಗೆದುಕೊಂಡಿತ್ತು. ಹೀಗಿರುವಾಗ ಈಗ ಮತ್ತೆ ಇಲ್ಲಿಯೇ ನಿವಾಸ ನಿರ್ಮಿಸಲು ಮುಂದಾಗುತ್ತಿರುವುದು ಸರಿಯಲ್ಲ. ಇದರಿಂದ ಕಾಲೇಜಿನ ಚಟುವಟಿಕೆಗಳಿಗೆ ತೊಂದರೆಯಾಗಲಿದೆ’ ಎಂದು ಹೇಳಿದರು.

‘ಸಾಹಿತ್ಯ–ಕಲೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಾಲೇಜಿನ ಜಾಗದಲ್ಲಿ ನಿರ್ಮಾಣಗೊಂಡಿರುವ ಕುವೆಂಪು ಕನ್ನಡ ಭವನದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ, ಕಲಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಕಲೆಗೆ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್‌.ಎಸ್‌. ಮಂಜುನಾಥ ಕುರ್ಕಿ ತಿಳಿಸಿದರು.

ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್‌. ಆರಾಧ್ಯ, ಸರ್ಕಾರಕ್ಕೆ ಕಳುಹಿಸಿರುವ ಪ್ರಸ್ತಾವವನ್ನು ಜಿಲ್ಲಾಧಿಕಾರಿ ಕೂಡಲೇ ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಹಿರಿಯ ಪತ್ರಕರ್ತ ಬಿ.ಎನ್‌. ಮಲ್ಲೇಶ್‌, ‘ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಅಧಿಕೃತವಾಗಿ ನಿವಾಸ ನಿರ್ಮಿಸಿಕೊಡಲಾಗಿದೆ. ದೂರವಾಗಲಿದೆ ಎಂಬ ಕಾರಣಕ್ಕೆ ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಅವರ ಅಧಿಕೃತ ನಿವಾಸಗಳು ಅನೈತಿಕ ಚಟುವಟಿಕೆ ತಾಣಗಳಾಗಿವೆ. ಯಾವುದೇ ಕಾರಣಕ್ಕೂ ಕಾಲೇಜಿನ ಜಾಗವನ್ನು ಪರಭಾರೆ ಮಾಡಬಾರದು’ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎ.ಆರ್‌. ಉಜಿನಪ್ಪ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.