ADVERTISEMENT

ದಾವಣಗೆರೆ | ಗಣೇಶೋತ್ಸವ: ಸೌಹಾರ್ದದಿಂದ ಆಚರಿಸಲು ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 15:48 IST
Last Updated 6 ಸೆಪ್ಟೆಂಬರ್ 2024, 15:48 IST
ಉಮಾ ಪ್ರಶಾಂತ್
ಉಮಾ ಪ್ರಶಾಂತ್   

ದಾವಣಗೆರೆ: ‘ನಾವೆಲ್ಲರೂ ಭಾರತೀಯರು. ಇಲ್ಲಿನ ಸಂಸ್ಕೃತಿ ಗೌರವಿಸಬೇಕು. ಗಣೇಶ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಸಲಹೆ ನೀಡಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಎಲ್ಲರೂ ಅವರವರ ಧರ್ಮ, ಸಂಸ್ಕೃತಿ ಅನುಸರಿಸಿ. ಆದರೆ ಬೇರೆಯವರ ಧರ್ಮಕ್ಕೆ ಧಕ್ಕೆ ತರಬಾರದು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸ್ವಾತಂತ್ರವಿದೆ. ಆದರೆ ಸ್ವಾತಂತ್ರ ಸ್ವೇಚ್ಚೆಯಾಗಬಾರದು’ ಎಂದು ಕಿವಿಮಾತು ಹೇಳಿದರು.

ADVERTISEMENT

ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ನೆರವಿಗೆ ಸಹಾಯವಾಣಿ–112ಕ್ಕೆ ಸಾರ್ವಜನಿಕರು ಕರೆ ಮಾಡಬಹುದು ಎಂದರು.

ನಿಗದಿಪಡಿಸಿದ ರಸ್ತೆಗಳಲ್ಲೇ ಸಾಗಿ, ನಿಗದಿತ ಸ್ಥಳಗಳಲ್ಲೇ ಗಣೇಶ ಮೂರ್ತಿ ವಿಸರ್ಜಿಸಬೇಕು. ಯಾವುದೇ ಕಾರಣಕ್ಕೂ ಗಣೇಶ ವಿಸರ್ಜನೆ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಬಾರದು. ಇಲಾಖೆಯ ಸೂಚನೆ, ನಿಯಮ ಪಾಲಿಸಬೇಕು. ಎಲ್ಲರೂ ಶಾಂತಿ, ಸಂಭ್ರಮದಿಂದ ಹಬ್ಬ ಆಚರಿಸಿ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ‌‌ವಿಜಯಕುಮಾರ ಎಂ. ಸಂತೋಷ, ಜಿ. ಮಂಜುನಾಥ, ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

‘ನಿಯಮ ಮೀರಿದರೆ ಕ್ರಮ’

ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2098 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು 12 ಅತಿ ಸೂಕ್ಷ್ಮ 146 ಸೂಕ್ಷ್ಮ ಪ್ರತಿಷ್ಠಾಪನಾ ಸ್ಥಳಗಳು ಎಂದು ಗುರುತಿಸಲಾಗಿದೆ. ಯಾವುದೇ ಕಾರಣಕ್ಕೂ ನಿಯಮ ಉಲ್ಲಂಘಿಸಬಾರದು ಎಂದು ಉಮಾ ಪ್ರಶಾಂತ್ ಎಚ್ಚರಿಸಿದ್ದಾರೆ. ಈ ಸಂಬಂಧ ವಿಡಿಯೊ ಸಂದೇಶದಲ್ಲಿ ಎಚ್ಚರಿಕೆ ನೀಡಿರುವ ಅವರು ‘ಈಗಾಗಲೇ ಸಂಘ–ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಹಲವು ಸಭೆ ನಡೆಸಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸುವಂತೆ ಸೂಚಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು ಹಾಗೂ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಪ್ರಚೋದನಕಾರಿ ಹಾಗೂ ನಿಷೇಧಿತ ಹಾಡುಗಳನ್ನು ಪ್ರಸಾರ ಮಾಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಬರಹ ಚಿತ್ರಗಳನ್ನು ಪೋಸ್ಟ್‌ ಮಾಡಬಾರದು. ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.