ಮಲೇಬೆನ್ನೂರು: ‘ಉದ್ಘಾಟನೆ, ಭೂಮಿಪೂಜೆ ಮೊದಲಾದ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಶಿಷ್ಟಾಚಾರ ಪಾಲಿಸುತ್ತಿಲ್ಲ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬಿದ್ ಅಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
‘ಶಾಸಕ ಬಿ.ಪಿ. ಹರೀಶ್ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ ಅನುಪಸ್ಥಿತಿಯಲ್ಲಿ ತರಾತುರಿಯಲ್ಲಿ ಕಾರ್ಯಕ್ರಮ ನಡೆಸುತ್ತಾರೆ. ರಾಜ್ಯ ಸರ್ಕಾರ ಯಾವುದೇ ಕಾಮಗಾರಿಗಳಿಗೆ ಅನುದಾನ ನೀಡುತ್ತಿಲ್ಲ, ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗಿದೆ ಎನ್ನುತ್ತಾರೆ. ರಾಜ್ಯ ಸರ್ಕಾರದ ಅನುದಾನ ಪಡೆದು ಕಾಮಗಾರಿಗೆ ಚಾಲನೆ ನೀಡುತ್ತಾರೆ’ ಎಂದು ಲೇವಡಿ ಮಾಡಿದರು.
‘ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸೌಹಾರ್ದ ಸಂಬಂಧ ಇಟ್ಟುಕೊಂಡಿಲ್ಲ. ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಾರೆ. ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಹೆಚ್ಚಿನ ಅನುದಾನ ಪಡೆಯಲು ಆಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
‘ಸರ್ಕಾರ ಅಂದಾಜು ₹ 35 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆಗಳನ್ನು ಮಹಾರಾಷ್ಟ್ರ, ಬಿಹಾರ ಚುನಾವಣೆಯಲ್ಲಿ ನಕಲು ಮಾಡಿ ಗೆಲುವು ಬಿಜೆಪಿ ಸಾಧಿಸಿದೆ’ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಪಟೇಲ್ ಮಂಜುನಾಥ್, ಪುರಸಭೆ ಸದಸ್ಯ ಬೋವಿ ಶಿವು, ನಾಮನಿರ್ದೇಶಿತ ಸದಸ್ಯ ಆರೀಫ ಅಲಿ, ಕೊಪ್ಪದ ಗಿರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಶಬ್ಬೀರ್ ಖಾನ್, ಪಿ. ಸೈಫುಲ್ಲಾ, ನಾಮ ನಿರ್ದೇಶಿತ ಪುರಸಭಾ ಸದಸ್ಯ ಬಿ. ವೀರಯ್ಯ ಸ್ವಾಮಿ, ಅಬ್ದುಲ್ ರೆಹಮಾನ್, ಪೂಜಾರ್ ಗಂಗಾಧರ್, ಕೊಟ್ರೇಶ್ ನಾಯ್ಕ, ಬೋವಿ ಕುಮಾರ್, ಶೇರ್ ಅಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.