
ಬಂಧನ (ಸಾಂದರ್ಭಿಕ ಚಿತ್ರ)
ದಾವಣಗೆರೆ: ಬಡಾವಣೆ ಠಾಣೆಯ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಮತ್ತೆ ಇಬ್ಬರನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಪುತ್ರರಾದ ಹುಸೇನ್ ಪೈಲ್ವಾನ್ (23) ಹಾಗೂ ಹಮ್ಜಾ (20) ಬಂಧಿತರು. ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ ಪೊಲೀಸರು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಯೂಬ್ ಪೈಲ್ವಾನ್ ಹಿರಿಯ ಪುತ್ರ ಹಸನ್ ಪೈಲ್ವಾನ್, ಇವರ ಸ್ನೇಹಿತರಾದ ಫೈಜಾನ್, ಅಬ್ರಾರ್, ಆಯಾನ್ ಅವರನ್ನು ಪೊಲೀಸರು ಬಂಧಿಸಿದ್ದರು.
ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮದೀನ ಆಟೊ ನಿಲ್ದಾಣದ ಬಳಿ ನಡೆದ ಗುಂಪು ಗಲಾಟೆ, ಬಡಾವಣೆ ಠಾಣಾ ವ್ಯಾಪ್ತಿಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಡೆದ ಗಲಾಟೆ ಹಾಗೂ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಎರಡು ಪೊಲೀಸ್ ಠಾಣೆಗಳಲ್ಲಿ 5 ಪ್ರಕರಣಗಳು ದಾಖಲಾಗಿವೆ. ನಗರ ಉಪವಿಭಾಗದ ಡಿವೈಎಸ್‌ಪಿ ಶರಣ ಬಸವೇಶ್ವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.
ಆರೋಪಿಗಳಾದ ಹುಸೇನ್ ಪೈಲ್ವಾನ್ ಹಾಗೂ ಹಮ್ಜಾ ಅವರನ್ನು ಸೋಮವಾರ ರಾತ್ರಿ ಬಂಧಿಸಿದ ಪೊಲೀಸರು ವಿದ್ಯಾನಗರ ಠಾಣೆಗೆ ಕರೆತಂದಿದ್ದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಮಂಗಳವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯ ಹಾಗೂ ಆಸ್ಪತ್ರೆಯ ಬಳಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
‘5 ಪ್ರಕರಣಗಳಿಗೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ವಿಡಿಯೊ ಪರಿಶೀಲಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಹಲವು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.