
ದಾವಣಗೆರೆ: ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ವಿಶೇಷ ಪರಿಷ್ಕರಣೆ ನಂತರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಲ್ಲಾಧಿಕಾರಿ ಕಾರ್ಯಾಲಯ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗಳು ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ, ಮತದಾರರ ಪರಿಷ್ಕರಣೆ ಹಾಗೂ ಅಂತಿಮ ಮತದಾರರ ಪಟ್ಟಿ ಕುರಿತು ಚರ್ಚೆ ನಡೆಸಿದರು.
ಮತದಾರರ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ https://ceo.karnataka.gov.in/en ನಲ್ಲಿಯೂ ನೋಡಬಹುದು. ಸಾರ್ವಜನಿಕರು ತಮ್ಮ ಹೆಸರುಗಳನ್ನು ಸರಿಯಾದ ಮಾಹಿತಿಯೊಂದಿಗೆ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂದು ಪರಿಶೀಲಿಸಿಕೊಳ್ಳಬಹುದು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 2,204 ಯುವ ಮತದಾರರು (18- 19 ವರ್ಷದವರು), 1 ವಿದೇಶಿ ಮತದಾರ, 2,542 ಅಂಗವಿಕಲ ಮತದಾರರಿದ್ದಾರೆ. 85 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟವರು 2,157 ಮತದಾರಿದ್ದಾರೆ. 217 ಮತಗಟ್ಟೆಗಳಿದ್ದು, ಹೊಸದಾಗಿ 67 ಮತಗಟ್ಟೆಗಳನ್ನು ಸೇರ್ಪಡೆಗೊಳಿಸಲಾಗಿದೆ. 24 ಮತಗಟ್ಟೆಗಳನ್ನು ಬದಲಾವಣೆ ಮಾಡಲಾಗಿದ್ದು, ಒಟ್ಟು ಈಗ 284 ಮತಗಟ್ಟೆಗಳಿವೆ.
ಮತದಾರರ ಭಾವಚಿತ್ರ, ಗುರುತಿನ ಚೀಟಿ ಮತ್ತು ಅರ್ಜಿಗಳ ಸಲ್ಲಿಕೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಾಗಿ ಜಿಲ್ಲಾ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಮತ್ತು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಮತದಾರರ ವಿವರ
114165 - ಪುರುಷರು
118355 - ಮಹಿಳೆಯರು
44 - ತೃತೀಯ ಲಿಂಗಿಗಳು
232564 – ಒಟ್ಟು ಮತದಾರರು
284 – ಒಟ್ಟು ಮತಗಟ್ಟೆಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.