ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ, ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ತಾಂಡಾ ಅಭಿವೃದ್ಧಿ ನಿಗಮದ ವಲಯ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ಕೆ.ಬಿ. ಬಡಾವಣೆಯ ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಜಯದೇವ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಹದಡಿ ರಸ್ತೆಯಲ್ಲಿರುವ ತಾಂಡಾ ಅಭಿವೃದ್ಧಿ ನಿಗಮದ ಕಚೇರಿ ಎದುರು ಜಮಾಯಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯ (ಟಿಎಸ್‌ಪಿ) ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದೇ ವಂಚಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಯ ₹ 40,000 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಅನ್ಯಾಯ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದೇ ಜನರ ದಿಕ್ಕು ತಪ್ಪಿಸುತ್ತಿದೆ’ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಬಂಗಾರು ಹನುಮಂತು ಆರೋಪಿಸಿದರು.
‘ದಲಿತ ಸಮುದಾಯ ತುಳಿಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಚಿವರನ್ನು ಸಂಪುಟದಿಂದ ಕಿತ್ತುಹಾಕಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ದುರುಪಯೋಗ ಮಾಡಿಕೊಂಡ ಕಾಂಗ್ರೆಸ್, ಸಚಿವರಾಗಿದ್ದ ನಾಗೇಂದ್ರ ಅವರನ್ನು ಹೊಣೆಗಾರರನ್ನಾಗಿ ಮಾಡಿತು. ಈಗ ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಸಂಪುಟದಿಂದ ಕಿತ್ತುಹಾಕಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮಾಜಿ ಶಾಸಕರಾದ ಎಚ್.ಪಿ.ರಾಜೇಶ್, ಬಸವರಾಜ ನಾಯ್ಕ, ಪ್ರೊ.ಲಿಂಗಣ್ಣ, ಮುಖಂಡರಾದ ಲೋಕಿಕೆರೆ ನಾಗರಾಜ್, ಧನಂಜಯ ಕಡ್ಲೆಬಾಳು, ಅನಿಲ್‌ಕುಮಾರ್, ಚಂದ್ರಶೇಖರ ಪೂಜಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.