ಮಗು (ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ಹೊನ್ನಾಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸ್ನಾನ ಗೃಹದ ಬಕೆಟ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ.
‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ನವಜಾತ ಶಿಶು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು, ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸಿ ಎಂದು ಅವರಿಗೆ ಸೂಚಿಸಲಾಗಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ಕೇಳಿರುವುದು ನಿಜ. ವಿಸ್ತೃತವಾಗಿ ವರದಿ ಸಲ್ಲಿಸಲಾಗುವುದು’ ಎಂದು ಡಿಎಚ್‌ಒ ಷಣ್ಮುಖಪ್ಪ ಪ್ರತಿಕ್ರಿಯಿಸಿದರು.
‘ಮಗು ಆರೋಗ್ಯವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ತಾಯಿ ಮಗು ಪಡೆಯಲು ನಿರಾಕರಿಸಿದ್ದಾಳೆ. ಹೀಗಾಗಿ ಚಿಕಿತ್ಸೆ ಬಳಿಕ ಮಗುವನ್ನು ಸರ್ಕಾರಿ ವಿಶೇಷ ದತ್ತು ಕೇಂದ್ರಕ್ಕೆ ಸೇರಿಸಲಾಗುತ್ತದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಕವಿತಾ ಟಿ.ಎನ್. ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.