ದಾವಣಗೆರೆ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ. ಮಂಡ್ಯ ಲೋಕಾಯುಕ್ತ ಇನ್‌ಸ್ಪೆಕ್ಟರ್ ಹನುಮಂತಪ್ಪ ಸೇರಿ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರು ನಿಲ್ಲಿಸಿ ಪ್ರಯಾಣಿಕರೊಂದಿಗೆ ಕೆಳಗೆ ಇಳಿದಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿ ಕಾರನ್ನು ಆವರಿಸಿಕೊಂಡಿದೆ ಎಂದು ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
‘ನಸುಕಿನ 1.55ಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಠಾಣೆಗೆ ಮಾಹಿತಿ ಬಂದಿತು. 10 ನಿಮಿಷದಲ್ಲಿ ಸ್ಥಳಕ್ಕೆ ಧಾವಿಸಿದೆವು. ಬೆಂಕಿಯ ಕೆನ್ನಾಲಿಗೆ ಇಡೀ ಕಾರನ್ನು ಆವರಿಸಿಕೊಂಡಿತ್ತು. 20 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆವು’ ಎಂದು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ.
ಲೋಕಾಯುಕ್ತ ಇನ್‌ಸ್ಪೆಕ್ಟರ್ ಹನುಮಂತಪ್ಪ, ಮದ್ದೂರು ಪುರಸಭಾ ಸದಸ್ಯ ಸಿದ್ದರಾಜು, ಉದ್ಯಮಿ ಚೇತನ್, ಪ್ರಮೋದ್ ಹಾಗೂ ಕೃಷ್ಣಪ್ಪ ಎಂಬುವರು ಮದ್ದೂರಿನಿಂದ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಕುಂದುವಾಡ ಸಮೀಪ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರಿಂದ ಕಾರು ಸರ್ವಿಸ್ ರಸ್ತೆಯಲ್ಲಿ ಸಾಗುತ್ತಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಹೆದ್ದಾರಿ ಸಂಚಾರ ಕೆಲ ಹೊತ್ತು ಅಸ್ತವ್ಯಸ್ತಗೊಂಡಿತ್ತು ಎಂದು ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.