ADVERTISEMENT

ದಾವಣಗೆರೆ ಪ್ರತ್ಯೇಕ ಹಾಲು ಒಕ್ಕೂಟ: ಬೈರತಿ ಬೆಂಬಲ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 15:57 IST
Last Updated 12 ಜುಲೈ 2021, 15:57 IST
ಬೈರತಿ ಬಸವರಾಜ
ಬೈರತಿ ಬಸವರಾಜ   

ದಾವಣಗೆರೆ: ‘ದಾವಣಗೆರೆಗೆ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ನನ್ನ ಸಹಮತವಿದ್ದು, ಈ ಸಂಬಂಧ ಸಹಕಾರ ಸಚಿವರ ಜೊತೆ ಚರ್ಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ಇಲ್ಲಿನ ಜಿಎಂಐಟಿ ಅತಿಥಿ ಗೃಹದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದ್ದಾರೆ.ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಯಾದರೆ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ. ಹೈನುಗಾರಿಕೆಗೆ ಮತ್ತಷ್ಟು ಉತ್ತೇಜನ ಸಿಗಲಿದೆ’ ಎಂದು ಹೇಳಿದರು.

‘ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ನಿಲುವಿಗೆ ನಾವೆಲ್ಲ ಬದ್ಧರಾಗಿದ್ದೇವೆ. ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಯಲಿದ್ದು, ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ. ಚುನಾವಣೆ ಸಂದರ್ಭ ಮಾತುಕೊಟ್ಟಂತೆ ಸಿಎಂ ನಡೆದುಕೊಳ್ಳುವರು. ರಮೇಶ ಜಾರಕಿಹೊಳಿ ಅವರ ಪ್ರಕರಣ ಕೂಡ ಅಂತಿಮ ಹಂತಕ್ಕೆ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಆಗುವ ತೀರ್ಮಾನದ ಪ್ರಕಾರ ಅವರಿಗೂ ಕೂಡ ಅನುಕೂಲವಾಗಲಿದೆ’ ಎಂದರು.

ADVERTISEMENT

‘ಸಿದ್ದರಾಮಯ್ಯ ದಿನಚರಿ ಗೊತ್ತು’

ದಾವಣಗೆರೆ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಈ ವಯಸ್ಸಲ್ಲೂ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ. ನಾನೂ ಸಿದ್ದರಾಮಯ್ಯ ಜತೆಗೆ ಇದ್ದವನು, ಅವರು ಬೆಳಗ್ಗೆ ಎಷ್ಟು ಹೊತ್ತಿಗೆ ಏಳುತ್ತಿದ್ದರು. ಯಡಿಯೂರಪ್ಪ ಎಷ್ಟು ಹೊತ್ತಿಗೆ ಏಳುತ್ತಾರೆ ಎಂಬುದು ನನಗೆ ಗೊತ್ತಿದೆ’

ಶೇ 20ರಷ್ಟು ಸರ್ಕಾರ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಪ್ರತಿಕ್ರಿಯಿಸಿದ್ದು ಹೀಗೆ.

‘ಸಿದ್ದರಾಮಯ್ಯ ಅವರು ಮುಂಜಾನೆ ಎಷ್ಟು ಹೊತ್ತಿಗೆ ಮನೆಯಿಂದ ಹೊರಬಂದು ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದರು. ಯಡಿಯೂರಪ್ಪ ಅವರು ಎಷ್ಟು ಹೊತ್ತಿಗೆ ಜನರ ಸಮಸ್ಯೆ ಆಲಿಸುತ್ತಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಂಡು ನಂತರ ಬೇರೆಯವರಿಗೆ ಪಾಠ ಮಾಡಲಿ.ಟೀಕೆ ಮಾಡಬೇಕು ಎಂಬ ಕಾರಣಕ್ಕೆ ವಿರೋಧ ಪಕ್ಷದ ನಾಯಕರು ಆಧಾರ ರಹಿತ ಟೀಕೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಯಡಿಯೂರಪ್ಪ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ಇಂದು ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ. ಸುಖಾಸುಮ್ಮನೆ ಟೀಕೆ ತರವಲ್ಲ.ಅತ್ಯುತ್ತಮ ಮಳೆಯೂ ಆಗುತ್ತದೆ, ಕೊರೊನಾ ಹಾವಳಿ ಕಡಿಮೆ ಆದರೆ ಅಭಿವೃದ್ಧಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.