
ಪ್ರೀತಂ ಗೌಡ
ದಾವಣಗೆರೆ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.
‘ಸಚಿವ, ಸಂಸದ ಹಾಗೂ ಶಾಸಕ ಸ್ಥಾನವನ್ನು ಒಂದೇ ಕುಟುಂಬಕ್ಕೆ ನೀಡುವ ವಿಚಾರದಲ್ಲಿ ಮತದಾರರು ಆಲೋಚನೆ ಮಾಡುತ್ತಿದ್ದಾರೆ. ಪಕ್ಷವು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಬೂತ್ ಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಿಸಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಹೋರಾಡಲಿವೆ. ಜೆಡಿಎಸ್ ನಾಯಕರೊಂದಿಗೆ ಚರ್ಚಿಸಲಾಗಿದ್ದು, ಕಾಂಗ್ರೆಸ್ ವಿರುದ್ಧ ಒಗ್ಗೂಡಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಚುನಾವಣಾ ಪೂರ್ವ ಮೈತ್ರಿಯು ಬಿಜೆಪಿಗೆ ಅನುಕೂಲ ಮಾಡಿಕೊಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಶಾಮನೂರು ಶಿವಶಂಕರಪ್ಪ ಅವರಿಗೆ ರಾಜ್ಯದಲ್ಲಿ ಗೌರವವಿತ್ತು. ಅವರ ರಾಜಕೀಯ ತಂತ್ರಗಾರಿಕೆ ಭಿನ್ನವಾಗಿತ್ತು. ಹೀಗಾಗಿ, ಕ್ಷೇತ್ರದ ವರ್ಗವೊಂದು ವಿಶ್ವಾಸವಿಟ್ಟು ಮತ ಹಾಕುತ್ತಿತ್ತು. ಇತ್ತೀಚಿನ ರಾಜಕೀಯ ಪಲ್ಲಟಗಳನ್ನು ಕ್ಷೇತ್ರದ ಜನರು ಸೂಕ್ಷ್ಮವಾಗಿ ಗಮನಿಸಿದ್ದಾರೆ’ ಎಂದರು.
‘ಉಪಚುನಾವಣೆಗೆ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯನ್ನು ಅನೇಕರು ತೋರಿಸಿದ್ದಾರೆ. ಈ ಕುರಿತು ಪಕ್ಷದ ಸಂಸದೀಯ ಮಂಡಳಿ ತೀರ್ಮಾನ ಕೈಗೊಳ್ಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ, ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಅಂಬಿಕಾ ಹುಲಿ ನಾಯ್ಕರ್, ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಬಸವರಾಜ ನಾಯ್ಕ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.