ADVERTISEMENT

ಬಾಡಿಗೆ ಕಟ್ಟಡದಲ್ಲಿ ಹಾಸ್ಟೆಲ್‌ ಪ್ರಾರಂಭಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ವಿದ್ಯಾರ್ಥಿನಿಲಯಗಳಿಗೆ ಹೆಚ್ಚಿದ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 5:02 IST
Last Updated 25 ಸೆಪ್ಟೆಂಬರ್ 2025, 5:02 IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾತನಾಡಿದರು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾತನಾಡಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಶಿಕ್ಷಣ ಪಡೆಯಲು ಹೊರಜಿಲ್ಲೆಯ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ನಗರಕ್ಕೆ ಬರುತ್ತಿದ್ದಾರೆ. ಇನ್ನೂ ನಾಲ್ಕೈದು ಹಾಸ್ಟೆಲ್‌ಗಳಿಗೆ ಬೇಡಿಕೆ ಇದೆ. ಅಗತ್ಯವಿದ್ದರೆ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಸತಿ ಶಾಲೆಗಳಲ್ಲಿ ಮೂಲಸೌಲಭ್ಯಗಳ ಕೊರತೆ ಪರಿಶೀಲಿಸಬೇಕು. ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್‌ ಅವರಿಗೆ ಸೂಚಿಸಿದರು.

ADVERTISEMENT

ಒತ್ತುವರಿ ಮಾಡಿದರೆ ಕ್ರಮ:

‘ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಕಾನೂನು ಬಾಹಿರ ಕೃತ್ಯಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಜಗಳೂರು ತಾಲ್ಲೂಕಿನ ಚಿದರುವಳ್ಳಿ ಗ್ರಾಮದ 13 ಎಕರೆ ಜಮೀನಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅನೇಕ ಬಡ ಕುಟುಂಬಗಳು ಮನೆ ನಿರ್ಮಿಸಿಕೊಂಡಿವೆ. ಆ ಪ್ರದೇಶವನ್ನು ಕಂದಾಯ ಗ್ರಾಮವನ್ನಾಗಿಸಲು ಸರ್ಕಾರಕ್ಕೆ ಪ್ರಸ್ತಾವವನ್ನು ಸಲ್ಲಿಸಲಾಗಿದೆ’ ಎಂದು ಹೇಳಿದರು.

‘ಕಂದಾಯ ಗ್ರಾಮವೆಂದು ಘೋಷಣೆಯಾದ ಬಳಿಕ ಅಧಿಕೃತವಾಗಿ ಹಕ್ಕುಪತ್ರ ವಿತರಿಸಲಾಗುವುದು. ಆ ಪ್ರದೇಶದಲ್ಲಿ ಪ್ರಸ್ತುತ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ. ಒಂದೇ ವೇಳೆ ನಿರ್ಮಾಣ ಕಾರ್ಯಗಳನ್ನು ಕೈಗೊಂಡಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.

51 ಪ್ರಕರಣ ದಾಖಲು: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಸೆ.24 ರವರೆಗೆ ಜಿಲ್ಲೆಯಲ್ಲಿ 51 ಪ್ರಕರಣ ದಾಖಲಾಗಿವೆ. ಇದರಲ್ಲಿ 2 ಕೊಲೆ, 4 ಪೋಕ್ಸೊ ಹಾಗೂ 45 ದೌರ್ಜನ್ಯ ಪ್ರಕರಣಗಳಿವೆ. ಈ ಪೈಕಿ 20 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ’ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

‘ಕೊಲೆ ಪ್ರಕರಣಗಳಲ್ಲಿ ಮೃತರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲು ದಾಖಲೆಗಳನ್ನು ಸಲ್ಲಿಸಲು ತಿಳಿವಳಿಕೆ ನೀಡಲಾಗಿದೆ. ದೌರ್ಜನ್ಯಕ್ಕೊಳಗಾದ ಪರಿಶಿಷ್ಟ ಜಾತಿಯ 93, ಪರಿಶಿಷ್ಟ ಪಂಗಡದ 43 ಸಂತ್ರಸ್ತರನ್ನು ಒಳಗೊಂಡಂತೆ 136 ಪ್ರಕರಣಗಳಲ್ಲಿ ₹ 1.2 ಕೋಟಿ ಪರಿಹಾರ ವಿತರಿಸಲಾಗಿದೆ. ನ್ಯಾಯಾಲಯದಲ್ಲಿ 146 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ’ ಎಂದು ಅಧಿಕಾರಿಗಳು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ, ಕೆಎಸ್‌ಆರ್‌ಟಿಸಿ ವಿಭಾಗೀಯ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್‌, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್ ಹಾಜರಿದ್ದರು.

ಮ್ಯಾನುಯಲ್‌ ಸ್ಕ್ಯಾವೆಂಜರ್‌ಗಳಿಗೆ ಭೂಮಿ ಮಂಜೂರು ಮಾಡುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇವರಿಗೆ ಗುರುತಿನ ಚೀಟಿ ವಿತರಿಸಲಾಗುವುದು
ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.