ADVERTISEMENT

ದಾವಣಗೆರೆ ವಿ.ವಿ. ಬೋಧಕ ಹುದ್ದೆ ನೇಮಕಾತಿಯಲ್ಲಿ ಅವ್ಯವಹಾರ: ಆರೋಪ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 17:10 IST
Last Updated 17 ಜೂನ್ 2019, 17:10 IST

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕಳೆದ ಬಾರಿ ನಡೆದ ಬೋಧಕ ವೃಂದದ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಆರೋಪಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯ ಹಗರಣಗಳ ಕೊಂಪೆಯಂತಾಗಿದೆ. ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ಯುಜಿಸಿ ನಿಮಯಾವಳಿಗಳನ್ನು ಗಾಳಿಗೆ ತೂರಿ ತಮಗೆ ಬೇಕಾದವರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ 1:3 ನಿಯಮ ಪಾಲಿಸಿಲ್ಲ. ಅವ್ಯವಹಾರದಲ್ಲಿ ಕುಲಪತಿ, ಕುಲಸಚಿವರು ಭಾಗಿಯಾಗಿದ್ದಾರೆ’ ಎಂದು ದೂರಿದರು.

‘ಇದೇ 19ರಿಂದ ಮತ್ತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಇಲ್ಲೂ ಅವ್ಯವಹಾರ ನಡೆದಿರುವ ಬಗ್ಗೆ ಅನುಮಾನ ಇದೆ. ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಹೀಗೆ ಎಲ್ಲ ವಿಭಾಗಗಳ ಪ್ರಾಧ್ಯಾಪಕ ಹುದ್ದೆಗಳಲ್ಲಿ ಅವ್ಯವಹಾರ ನಡೆದಿದೆ. ಒಂದು ಹುದ್ದೆಗೆ ₹ 25 ಲಕ್ಷ ವಸೂಲಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಮೇ 23, 24ರಂದು ತರಾತುರಿಯಲ್ಲಿ ಸಿಂಡಿಕೇಟ್‌ ಸಭೆ ಕರೆದು, ಕೆಲವೇ ಗಂಟೆಗಳಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಿ, ಅಭ್ಯರ್ಥಿಗಳಿಗೆ ಆದೇಶ ಪ್ರತಿಯನ್ನೂ ನೀಡಲಾಗಿದೆ. ಕೆಲವೇ ಗಂಟೆಗಳಲ್ಲಿ ಈ ಎಲ್ಲ ಪ್ರಕ್ರಿಯೆ ಮುಗಿಸಿರುವ ಕಾರಣ ಅವ್ಯವಹಾರ ನಡೆಸಿರುವುದು ಸ್ಪಷ್ಟವಾಗುತ್ತದೆ. ಈ ಬಗ್ಗೆ ಆಡಿಯೊ ಕ್ಲಿಪಿಂಗ್‌ ಕೂಡ ಇದೆ. ಅವ್ಯವಹಾರ ಸಂಬಂಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು. ಆಯ್ಕೆ ‍ಪ್ರಕ್ರಿಯೆ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸುತ್ತೇವೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ಅಮ್ಜದ್‌ ಅಲಿ, ಕೆ.ಎಚ್‌. ಮೆಹಬೂಬ್‌, ಸಂತೋಷ ದೊಡ್ಮನಿ, ಎಂ. ರವಿ. ಬಾಬೂರಾವ್‌, ದಿಲಾವರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.