ADVERTISEMENT

ಪದವಿ ಪರೀಕ್ಷೆ ಮುಂದೂಡಿ: ಎಐಡಿಎಸ್‌ಒ

ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 5:51 IST
Last Updated 28 ಸೆಪ್ಟೆಂಬರ್ 2025, 5:51 IST
ದಾವಣಗೆರೆಯ ಜಯದೇವ ವೃತ್ತದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಯದೇವ ವೃತ್ತದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ   

ದಾವಣಗೆರೆ: ‘ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳು ಕಳೆದರೂ, ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ಇದರಿಂದ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಈ ಶೈಕ್ಷಣಿಕ ಗೊಂದಲವನ್ನು ಕೂಡಲೇ ಪರಿಹರಿಸಬೇಕು’ ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಸರ್ಕಾರಿ ಪದವಿ ಕಾಲೇಜಿನಿಂದ ಜಯದೇವ ವೃತ್ತದವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈಗಾಗಲೇ ಖಾಸಗಿ ಕಾಲೇಜುಗಳಲ್ಲಿ ತರಗತಿಗಳು ಸರಾಗವಾಗಿ ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಆಂತರಿಕ ಪರೀಕ್ಷೆಗಳನ್ನು ಮುಗಿಸಿ ಸೆಮಿಸ್ಟರ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿ ನಿತ್ಯ ಕಾಲೇಜಿಗೆ ತೆರಳಿ ಖಾಲಿ ಬೋರ್ಡ್ ಹಾಗೂ ಗೋಡೆ ನೋಡಿ ಮನೆಗೆ ತೆರಳುವ ಸ್ಥಿತಿ ಇದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. 

ADVERTISEMENT

‘2025-26ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ ದಾವಣಗೆರೆ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಡೆಯಲಿವೆ. ಇನ್ನೂ ಸರಿಯಾಗಿ ತರಗತಿಗಳೇ ಆರಂಭವಾಗದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇದರಿಂದ ಘೋರ ಅನ್ಯಾಯವಾಗುತ್ತದೆ. ಸರ್ಕಾರ ಕೂಡಲೇ ಪರೀಕ್ಷೆ ಮುಂದೂಡಬೇಕು’ ಎಂದು ಎಐಡಿಎಸ್‌ಒನ ಜಿಲ್ಲಾ ಘಟಕದ ಅಧ್ಯಕ್ಷೆ ಪೂಜಾ ನಂದಿಹಳ್ಳಿ ಆಗ್ರಹಿಸಿದರು. 

ಸಂಘಟನಾಕಾರರಾದ ಎಚ್.ಡಿ.ಗಂಗಾಧರ, ವಿ.ಎಚ್. ಮಂಜುನಾಥ, ಸಿದ್ದಿಕ್ ಆವರಗೆರೆ, ವಿಕಾಸ್ ಎಂ.ಆರ್., ಲಿಖಿತ್ ಕುಮಾರ್ ಕೆ., ಸಹನಾ ಎನ್., ಪ್ರಿಯಾಂಕಾ ಪಿ., ಐಶ್ವರ್ಯಾ, ಚೈತ್ರಾ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.