ADVERTISEMENT

ದಾವಣಗೆರೆ: ದ್ವಿಭಾಷಾ ನೀತಿ ಜಾರಿಗೆ ಒತ್ತಾಯ

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 5:57 IST
Last Updated 6 ಜುಲೈ 2025, 5:57 IST
ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಮಹಾನಗರ ಪಾಲಿಕೆಯ ಎದುರು ಜಮಾಯಿಸಿದ ಪ್ರತಿಭಟನಕಾರರು ಹಿಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪಠ್ಯಕ್ರಮದಲ್ಲಿ ಪ್ರಥಮ ಭಾಷೆಯಾಗಿ ಕನ್ನಡ, ದ್ವಿತೀಯ ಭಾಷೆಯಾಗಿ ಇಂಗ್ಲಿಷ ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. 3ನೇ ಭಾಷೆಯಾಗಿ ಹಿಂದಿ ಕಲಿಯುವುದು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇದು ಒತ್ತಡವನ್ನು ಸೃಷ್ಟಿಸುತ್ತಿದೆ ಎಂದು ದೂರಿದರು.

ADVERTISEMENT

2023–24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದ 90,794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಪರೀಕ್ಷೆ ಎದುರಿಸಿದ ಒಟ್ಟು ವಿದ್ಯಾರ್ಥಿಗಳಲ್ಲಿ ಹಿಂದಿಯಲ್ಲಿ ಅನುತ್ತೀರ್ಣರಾದವರ ಪಾಲು ಶೇ 21ರಷ್ಟಿದೆ. 2024–25ರಲ್ಲಿ ಈ ಸಂಖ್ಯೆ 1.20 ಲಕ್ಷಕ್ಕಿಂತ ಹೆಚ್ಚಾಗಿದೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆ. ಹಿಂದಿ ಹೇರಿಕೆಯಿಂದಾಗಿ ಕನ್ನಡದ ವಿದ್ಯಾರ್ಥಿಗಳ ಭವಿಷ್ಯ ಬಲಿಯಾಗುತ್ತಿದೆ ಎಂದು ಕಿಡಿಕಾರಿದರು.

ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿದೆ. ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಅಳವಡಿಸಿಕೊಂಡಿದೆ. ಮಹಾರಾಷ್ಟ್ರ ಕೂಡ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ. ಕನ್ನಡಿರಿಗೆ ಉದ್ಯೋಗ ದೊರೆತಿಲ್ಲ ಎಂದರು.

ರಾಜ್ಯದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿಯೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣವನ್ನೂ ನೀಡಬೇಕು. ತ್ರಿಭಾಷಾ ನೀತಿಯಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಗತ್ಯ ಒತ್ತಡವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್‌.ರಾಮೇಗೌಡ, ಮುಖಂಡರಾದ ವಿನಯ್, ಆನಂದ್, ರವಿಕುಮಾರ್, ರಾಜೇಶ್ ಹಾಜರಿದ್ದರು.

Highlights - ತಮಿಳುನಾಡು, ಮಹಾರಾಷ್ಟ್ರ ಮಾದರಿಗೆ ಒತ್ತಾಯ ಕನ್ನಡದ ಅಸ್ಮಿತೆ ಉಳಿಸಲು ಆಗ್ರಹ ತ್ರಿಭಾಷಾ ಸೂತ್ರದಿಂದ ಕನ್ನಡಿಗರಿಗೆ ಇಲ್ಲ ಪ್ರಯೋಜನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.