ADVERTISEMENT

ಆತ್ಮವಿಶ್ವಾಸ ತುಂಬುವುದು ಸರ್ಕಾರದ ಹೊಣೆ: ಶಾಸಕ ಕೆ.ಎಸ್‌. ಬಸವಂತಪ್ಪ

ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 6:21 IST
Last Updated 4 ಡಿಸೆಂಬರ್ 2025, 6:21 IST
ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಹಾಗೂ ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ ಬಹುಮಾನ ವಿತರಿಸಿದರು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಹಾಗೂ ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ ಬಹುಮಾನ ವಿತರಿಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಅಂಗವಿಕಲರಲ್ಲಿ ಪ್ರೀತಿ, ವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವಂತೆ ಅವಕಾಶ ಕಲ್ಪಿಸುವ ಹೊಣೆಗಾರಿಕೆ ಸರ್ಕಾರ ಮತ್ತು ಸಮಾಜದ ಮೇಲಿದೆ ಎಂದು ಶಾಸಕ ಕೆ.ಎಸ್‌. ಬಸವಂತಪ್ಪ ಅಭಿಪ್ರಾಯಪಟ್ಟರು.

ನಗರದ ಹೊರವಲಯದ ವಡ್ಡಿನಹಳ್ಳಿಯ ಅಂಗವಿಕಲರ ಕೌಶಲಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರದಲ್ಲಿ (ಸಿಆರ್‌ಸಿ) ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಅಂಗವಿಕಲರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ಉಂಟಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಸಮುದಾಯದ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು. ಸರ್ಕಾರ ಅಂಗವಿಕಲರ ಅಧಿನಿಯಮ ರೂಪಿಸಿದ್ದು, ಅನೇಕ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳು ಮೊಟಕುಗೊಳ್ಳಬಾರದು’ ಎಂದು ಸಲಹೆ ನೀಡಿದರು.

ADVERTISEMENT

‘ಅಂಗವಿಕಲರಲ್ಲಿ ಧೈರ್ಯ ತುಂಬಿದಾಗ ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಅಂಗವಿಕಲರಿಗೆ ಸರ್ಕಾರ ಕಲ್ಪಿಸಿದ ಸೌಲಭ್ಯಗಳು ಸರಿಯಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಸಿಆರ್‌ಸಿ ಮಾದರಿಯ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಅಂಗವಿಕಲರ ಏಳಿಗೆಗೆ ಹಲವು ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಶಿಕ್ಷಣ, ಜೀವನ ಕೌಶಲಗಳನ್ನು ನೀಡುತ್ತಿವೆ. ಇಂತಹ ಕೌಶಲ ಪಡೆದವರಿಗೆ ಅಂಗವೈಕಲ್ಯ ಅಡ್ಡಿಯಾಗದು. ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮನೋಭಾವವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು. ಅವರ ಅದಮ್ಯ ಶಕ್ತಿಯನ್ನು ಗೌರವದಿಂದ ಕಾಣಬೇಕು’ ಎಂದು ಕಿವಿಮಾತು ಹೇಳಿದರು.

ಅಂಗವಿಕಲರಿಗೆ ಸೈಕಲ್, ಕೃತಕ ಕಾಲು ಸೇರಿ ಇತರ ಸೌಲಭ್ಯಗಳನ್ನು ವಿತರಿಸಲಾಯಿತು. ಕೇಂದ್ರದ ನಿರ್ದೇಶಕ ಕೆ. ಮಾರುತಿಗೌಡ, ಪುನರ್ವಸತಿ ಅಧಿಕಾರಿ ವಿ. ಕನಗ ಸಭಾಪತಿ, ಆಡಳಿತಾಧಿಕಾರಿ ವೈ. ಶ್ರೀನಾಥ್‌, ಉದ್ಯಮಿಗಳಾದ ರವಿರಾಜ್, ವಾಸುದೇವ ರಾಯ್ಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಣ್ಣ ಹಾಜರಿದ್ದರು.

‘ಬಾಳಲ್ಲಿ ಬೆಳಕು ಮೂಡಿಸುತ್ತೇವೆ’

‘ಅಂಗವಿಕಲರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವರ ಬಾಳಲ್ಲಿ ಬೆಳಕು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಶಿವಕುಮಾರ್‌ ಹೇಳಿದರು. ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಅಂಗವೈಕಲ್ಯ ಶಾಪವೆಂದು ಚಿಂತಿಸಿದರೆ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಮೆಟ್ಟಿ ಸಾಧನೆ ಮಾಡಿದ ಅನೇಕರು ಸಮಾಜದಲ್ಲಿದ್ದಾರೆ. ಇವರ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿ ಆಗಬೇಕು. ಅವರಲ್ಲಿರುವ ವಿಶೇಷ ಶಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಕಿವಿಮಾತು ಹೇಳಿದರು.

ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್‌ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ಕೆ. ಪ್ರಕಾಶ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.