
ದಾವಣಗೆರೆ: ನಗರದೇವತೆ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವ ಫೆ.22ರಿಂದ ಆರಂಭವಾಗಲಿದ್ದು, ಜಾತ್ರೆಯಲ್ಲಿ ಪ್ರಾಣಿಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ‘ದೇಗುಲದ ಸುತ್ತ ಎಲ್ಲಿಯೂ ಪ್ರಾಣಿಬಲಿ ನೀಡುವಂತಿಲ್ಲ’ ಎಂದು ಹೇಳಿದರು.
‘ಜಾತ್ರಾ ಮಹೋತ್ಸವ ಫೆ.22ರಿಂದ 25ರವರೆಗೆ ನಡೆಯಲಿದೆ. ನಿತ್ಯ 2 ಲಕ್ಷಕ್ಕೂ ಹೆಚ್ಚು ಜನರು ದೇವಿ ದರ್ಶನಕ್ಕೆ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಭಕ್ತರಿಗೆ ತೊಂದರೆಯಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ದೇಗುಲದ ಸುತ್ತ ಸ್ವಚ್ಛತೆಗೆ ಒತ್ತು ನೀಡಬೇಕು’ ಎಂದು ಸೂಚನೆ ನೀಡಿದರು.
‘ಜಾತ್ರೆಯ ಅಂಗವಾಗಿ ವಿದ್ಯುತ್ ದೀಪಾಲಂಕಾರಕ್ಕೆ ತೀರ್ಮಾನಿಸಲಾಗಿದೆ. ರಾತ್ರಿ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗದಂತೆ ಎಚ್ಚರವಹಿಸುವ ಅಗತ್ಯವಿದೆ. ಭಕ್ತರಿಗೆ ಕಿರಿಕಿರಿ ಆಗದಂತೆ ಅಂಗಡಿಗಳನ್ನು ತೆರೆಯಬೇಕು. ನಿರಂತರ ಕುಡಿಯುವ ನೀರು ಪೂರೈಕೆ, ಶೌಚಾಲಯ, ಆರೋಗ್ಯ ತಪಾಸಣಾ ಕೇಂದ್ರ, ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.
‘ದುರ್ಗಾಂಬಿಕ ದೇವಿಯ ರಥ ಸಂಚರಿಸುವ ಮಾರ್ಗ ಮತ್ತು ದೇಗುಲದ ಸುತ್ತ ಗುಂಡಿಗಳನ್ನು ಮುಚ್ಚಬೇಕು. ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರಸಾದ ತಯಾರಿಸುವ ಸ್ಥಳ, ದೇವಸ್ಥಾನದ ಪ್ರವೇಶ ದ್ವಾರ ಸೇರಿದಂತೆ ಅಗತ್ಯವಿರುವ ಸ್ಥಳಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು’ ಎಂದರು.
‘ಜಾತ್ರಾ ಸಂದರ್ಭದಲ್ಲಿ ಬೆತ್ತಲೆ ಮತ್ತು ಅರೆಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದೆ. ದೇಗುಲದ ಸುತ್ತ ನಿಗಾ ಇಡುವ ಅಗತ್ಯವಿದೆ’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
‘ಸಾರ್ವಜನಿಕರ ಹಿತದೃಷ್ಟಿಯಿಂದ ಹಿಲಿಯಂ ಗ್ಯಾಸ್ ಬಲೂನ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಸಮೀಪ ಮದ್ಯ ಮಾರಾಟ ಮಾಡುವಂತಿಲ್ಲ. ನಿಷೇಧಿತ ವಸ್ತುಗಳನ್ನು ಪ್ರದರ್ಶಿಸುವಂತಿಲ್ಲ. ಕಾನೂನು ಮೀರಿ ವರ್ತಿಸಿದರೆ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
‘ಜಾತ್ರೆಯ ಅಂಗವಾಗಿ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸುವಾಗ ಅನುಮತಿ ಕಡ್ಡಾಯ. ದೇಗುಲದ ಟ್ರಸ್ಟ್ ಸದಸ್ಯರು ಕೂಡ ಈ ವಿಚಾರದಲ್ಲಿ ಸಹಕರಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕು’ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.