ದಾವಣಗೆರೆ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ನಡೆದ ಮತ ಕಳವು ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಮಹಾರಾಷ್ಟ್ರ ಸೇರಿದಂತೆ ದೇಶದ ಎಲ್ಲೆಡೆ ನಡೆದಿದೆ. ಬಿಹಾರದಲ್ಲಿ ಹೊಸ ರೂಪ ಪಡೆದುಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ್ ಸೊರಕೆ ಆರೋಪಿಸಿದರು.
ಇಲ್ಲಿನ ತೊಗಟವೀರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಬುಧವಾರ ಏರ್ಪಡಿಸಿದ್ದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಅಕ್ರಮದ ಕುರಿತು ಪರಿಶೀಲಿಸಲಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲೆಡೆ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತ ಪಡೆದಿದ್ದರೂ ಮಹದೇವಪುರದಲ್ಲಿ ಮಾತ್ರ ಬಿಜೆಪಿಗೆ ಅಧಿಕ ಮತಗಳು ಸಿಕ್ಕಿವೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಅಕ್ರಮ ಬಯಲಿಗೆ ಎಳೆಯಲಾಗಿದೆ’ ಎಂದು ಹೇಳಿದರು.
‘ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಎದುರಾಗಲಿದೆ. ಇದರ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಚುನಾವಣೆಯೂ ನಡೆಯಬಹುದು. ಕಾರ್ಯಕರ್ತರ ಈ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಪ್ರಯತ್ನ ಆರಂಭವಾಗಿದೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳುವ ಅಗತ್ಯವಿದೆ’ ಎಂದು ಹೇಳಿದರು.
‘ಚುನಾವಣೆಗಳು ಯುದ್ಧದ ರೀತಿಯಲ್ಲಿ ನಡೆಯುತ್ತಿವೆ. ಇಲ್ಲಿ ಸೇನಾಧಿಕಾರಿ ಮಾತ್ರ ಇದ್ದರೆ ಸಾಲದು. ಯೋಧರು ಕೂಡ ಬೇಕಾಗುತ್ತಾರೆ. ರಾಜ್ಯದಲ್ಲಿ 59,000 ಬೂತ್‌ಗಳಿದ್ದು, ಇಲ್ಲಿ ಸಮಿತಿ ರಚನೆ ಮಾಡಬೇಕು. ಪ್ರತಿ ಬೂತ್‌ನಿಂದ ಇಬ್ಬರನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವವರನ್ನು ಗುರುತಿಸಿ ಮುನ್ನೆಲೆಗೆ ತರಬೇಕು’ ಎಂದು ಸಲಹೆ ನೀಡಿದರು.
‘ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ರಾಜ್ಯದ 4.09 ಲಕ್ಷ ಕೋಟಿ ಬಜೆಟ್‌ನಲ್ಲಿ ₹ 58,000 ಕೋಟಿ ಗ್ಯಾರಂಟಿ ಯೋಜನೆಗಳಿಗೆ ವೆಚ್ಚವಾಗುತ್ತಿದೆ. ಮಾಸಿಕ ಪಿಂಚಣಿ, ಆರ್ಥಿಕ ನೆರವು ಯೋಜನೆ ಸೇರಿದಂತೆ ₹ 1 ಲಕ್ಷ ಕೋಟಿ ಅನುದಾನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತಿದೆ. ಇದು ಜನರ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದ್ದು, ಹಣ ಮಾರುಕಟ್ಟೆಗೆ ಬರುತ್ತಿದೆ’ ಎಂದು ಹೇಳಿದರು.
ಶಾಸಕ ಕೆ.ಎಸ್. ಬಸವಂತಪ್ಪ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಶಾಸಕ ಎಸ್.ರಾಮಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಬಾಯಿ, ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಬಿ.ಎಚ್. ವೀರಭದ್ರಪ್ಪ, ಎಸ್. ಮಲ್ಲಿಕಾರ್ಜುನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.