ADVERTISEMENT

ಗ್ರಾಮಗಳ ಅಭಿವೃದ್ಧಿಗೆ ಒತ್ತು

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2018, 16:05 IST
Last Updated 24 ಡಿಸೆಂಬರ್ 2018, 16:05 IST
ಚನ್ನಗಿರಿ ತಾಲ್ಲೂಕು ತಿಮ್ಮಲಾಪುರ ಗ್ರಾಮದಲ್ಲಿ ಸೋಮವಾರ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು.
ಚನ್ನಗಿರಿ ತಾಲ್ಲೂಕು ತಿಮ್ಮಲಾಪುರ ಗ್ರಾಮದಲ್ಲಿ ಸೋಮವಾರ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು.   

ಚನ್ನಗಿರಿ: ಮುಂದಿನ ಐದು ವರ್ಷದ ಅವಧಿಯಲ್ಲಿ ಈ ಕ್ಷೇತ್ರದ ಯಾವ ಗ್ರಾಮದಲ್ಲೂ ಮಣ್ಣಿನ ರಸ್ತೆಗಳು ಇಲ್ಲದಂತೆ ಹೊಸದಾಗಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸುವ ಮೂಲಕ 'ದೂಳು ಮುಕ್ತ' ಕ್ಷೇತ್ರವನ್ನಾಗಿ ಮಾಡಲಾಗುವುದು. ಒಟ್ಟಾರೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ತಾಲ್ಲೂಕಿನ ತಿಮ್ಮಲಾಪುರ ಗ್ರಾಮದಲ್ಲಿ ಸೋಮವಾರ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ಗ್ರಾಮದಲ್ಲಿ ₹ 1.95 ಕೋಟಿ ವೆಚ್ಚದಲ್ಲಿ 2150 ಮೀಟರ್ ದೂರದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಈ ಗ್ರಾಮ ಅತ್ಯಂತ ಹಿಂದುಳಿದ ಗ್ರಾಮವಾಗಿದ್ದು, ಇನ್ನು ಮೂರು ತಿಂಗಳೊಳಗೆ ವಸತಿ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಹಾಗೆಯೇ ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೇ ಇರುವುದು ಕಂಡು ಬಂದಿದ್ದು, ದೀನ್ ದಯಾಳ್ ಉಪಾಧ್ಯಾಯ ಯೋಜನೆ ಅಡಿ ಅಂತಹ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒಂದು ತಿಂಗಳಲ್ಲಿ ಕಲ್ಪಿಸಿಕೊಡಲಾಗುವುದು ಎಂದರು.

ADVERTISEMENT

ಅರಣ್ಯ ಪ್ರದೇಶದಲ್ಲಿ 3.5 ಎಕರೆ ಜಮೀನನ್ನು ಸಾಗುವಳಿ ಮಾಡುವ ಅವಕಾಶ ಇನ್ನು, ಈಗಾಗಲೇ ಅರ್ಜಿ ಹಾಕಿರುವ ಸಾಗುವಳಿದಾರರಿಗೆ ಕಾನೂನಿನ ಪರಿಮಿತಿಯೊಳಗೆ ಸಾಗುವಳಿ ಚೀಟಿಯನ್ನು ಕೊಡಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಗ್ರಾಮಗಳ ಅಭಿವೃದ್ಧಿ ವಿಷಯದಲ್ಲಿ ಯಾರೂ ರಾಜಕೀಯ ಬೆರೆಸಬಾರದು. ಅದೇ ರೀತಿ ನಿಮ್ಮ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನಾವು ಕೊಡುತ್ತಿದ್ದು, ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದ ನಮ್ಮ ಮೇಲೆ ಇರಬೇಕು. ನೀವು ಸಹಕಾರ, ಬೆಂಬಲ ನೀಡಿದರೆ ಉತ್ಸಾಹದಿಂದ ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎನ್. ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ್, ನಾಗರಾಜ್, ಸುರೇಶ್, ಪಿಡಿಒ ಸಂಗಣ್ಣ ಪಾಟೀಲ್, ಗುತ್ತಿಗೆದಾರ ಆರ್. ಪರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.