ADVERTISEMENT

ಎಸ್ಸೆಸ್ಸೆಲ್ಸಿ: ಸುಗಮ ಪರೀಕ್ಷೆಗೆ ಕ್ರಮ ಕೈಗೊಳ್ಳಿ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 15:16 IST
Last Updated 20 ಮಾರ್ಚ್ 2020, 15:16 IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ನೋಡಲ್ ಅಧಿಕಾರಿ ವೀರಣ್ಣ ಜತ್ತಿ, ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಇದ್ದರು.
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ನೋಡಲ್ ಅಧಿಕಾರಿ ವೀರಣ್ಣ ಜತ್ತಿ, ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಇದ್ದರು.   

ದಾವಣಗೆರೆ: ಜಿಲ್ಲೆಯಲ್ಲಿ ಶಿಕ್ಷಕರು, ಅಧಿಕಾರಿಗಳ ಸಹಕಾರದಿಂದ ಕಳೆದ ಬಾರಿ ಉತ್ತಮ ಫಲಿತಾಂಶ ಬಂದಿದೆ. ಈ ಬಾರಿಯೂ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು, ಇಲಾಖೆ ವೀಕ್ಷಕರಿಗೆಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

‘ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಾರೆ ಎಂಬ ಮಾತು ಸರ್ಕಾರದ ಮಟ್ಟದಲ್ಲಿದೆ. ಇದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ. ಪರೀಕ್ಷೆ ಸುಗಮವಾಗಿ ನಡೆಸಲು ಎಲ್ಲ ಸಹಕಾರ ನೀಡುತ್ತೇನೆ. ನೀವೂ ಸಹಕಾರ ನೀಡುತ್ತೀರಿ ಎಂಬ ವಿಶ್ವಾಸ ಇದೆ’ ಎಂದು ಹೇಳಿದರು.

ADVERTISEMENT

ಪ್ರಾಸ್ತಾವಿಕವಾಗಿ ಮಾತನಾಡಿದ ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ, ‘ಜಿಲ್ಲೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಮಾರ್ಚ್‌ 27ರಿಂದ ಏಪ್ರಿಲ್‌ 9ರವರೆಗೆ ಪರೀಕ್ಷೆ ನಡೆಯಲಿದೆ.ಜಿಲ್ಲೆಯಲ್ಲಿ 435 ಶಾಲೆಗಳಿದ್ದು, 148 ಸರ್ಕಾರಿ, 171 ಅನುದಾನಿತ, 116 ಅನುದಾನ ರಹಿತ ಶಾಲೆಗಳಿವೆ. 37ಸರ್ಕಾರಿ,34ಅನುದಾನಿತ,8ಅನುದಾನಿತ ರಹಿತ ಶಾಲೆಗಳ ಪರೀಕ್ಷಾ ಕೇಂದ್ರಗಳಿವೆ. 10,311 ವಿದ್ಯಾರ್ಥಿಗಳು, 10,616 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. 79 ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಕೆಲ ಶಾಲೆಗಳಲ್ಲಿ ಎಲ್ಲಾ ಕೊಠಡಿಗಳಿಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಇನ್ನು ಕೆಲವೆಡೆ ಆವರಣ, ಮುಖ್ಯ ಕೊಠಡಿಗೆ ಮಾತ್ರ ಅಳವಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಯಾವ ಕೇಂದ್ರಗಳಿಗೆ ಸೌಲಭ್ಯ ಇಲ್ಲ ಎಂಬ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಬೇಕು. ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೇಂದ್ರಗಳಿಗೆ ಹಾಗೂ ಪಶ್ನೆಪತ್ರಿಕೆ ಸಾಗಣೆ ಸಂಬಂಧ ಬಂದೋಬಸ್ತ್‌ ಕಲ್ಪಿಸುವಂತೆ ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಮೊಬೈಲ್‌ ಅವಾಂತರದಿಂದ ಹಲವು ಬಾರಿ ಇಲಾಖೆ ಮುಜುಗರಕ್ಕೆ ಒಳಗಾಗಿದೆ. ಇದನ್ನು ತಪ್ಪಿಸಲು ಕೇಂದ್ರಗಳಲ್ಲಿ ಮೊಬೈಲ್‌ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ. ಕಳೆದ ಬಾರಿ ಗಣಿತ ವಿಷಯ ಉತ್ತರ ಪತ್ರಿಕೆ ಬೇರೆ ವಿಷಯಕ್ಕೆ. ಬೇರೆ ವಿಷಯದ ಉತ್ತರ ಪತ್ರಿಕೆ ಗಣಿತಕ್ಕೆ ನೀಡಿ ಗೊಂದಲವಾಗಿತ್ತು. ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪರೀಕ್ಷಾ ಸಿದ್ಧತೆಯ ಮಾಹಿತಿ ಪಡೆದ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ವೀರಣ್ಣ ಜತ್ತಿ, ‘ಪರೀಕ್ಷೆ ಸಮಯದಲ್ಲಿ ವಿದ್ಯುತ್‌ ಸ್ಥಗಿತಗೊಳಿಸದಂತೆ ಬೆಸ್ಕಾಂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಬೇಕು. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಿಸಿ ಟಿವಿ ಲಭ್ಯವಿಲ್ಲದೇ ಇರುವ ಶಾಲೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಗಂಗಾಧರ್,ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಭಿವೃದ್ಧಿ) ಎಚ್‌.ಕೆ. ಲಿಂಗರಾಜು, ಖಜಾನೆ ಇಲಾಖೆಯ ಉಪ ನಿರ್ದೇಶಕ ರಾಜಣ್ಣ, ಸರ್ಕಲ್‌ ಇನ್‌ಸ್ಪೆಕ್ಟರ್‌ ಸತೀಶ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.