ADVERTISEMENT

16ರಂದು ಸಿಇಟಿ ಮಾದರಿಯಲ್ಲಿ ಪರೀಕ್ಷೆ

6ನೇ ತರಗತಿಗೆ ಪ್ರವೇಶ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 6:58 IST
Last Updated 14 ಸೆಪ್ಟೆಂಬರ್ 2021, 6:58 IST
ಪೂಜಾರ ವೀರಮಲ್ಲಪ್ಪ
ಪೂಜಾರ ವೀರಮಲ್ಲಪ್ಪ   

ಪ್ರಜಾವಾಣಿ ವಾರ್ತೆ

ದಾವಣಗೆರೆ:ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಸಿಇಟಿ ಮಾದರಿಯಲ್ಲಿ ಸೆ.16ರಂದು ಪ್ರವೇಶ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಕೈಗೊಂಡಿದೆ.

ಜಿಲ್ಲೆಯಲ್ಲಿ ಒಟ್ಟು 3,140 ವಿದ್ಯಾರ್ಥಿ
ಗಳು ಪರೀಕ್ಷೆಗೆ ಹಾಜರಾಗಲಿದ್ದು, ಕೋವಿಡ್ ನಿಯಂತ್ರಣ ಮಾರ್ಗಸೂಚಿ
ಯನ್ವಯ ಸುಗಮ ಹಾಗೂ ಸುರಕ್ಷತಾ ಕ್ರಮಗಳೊಂದಿಗೆ ನಡೆಸಬೇಕು ಎಂದು ಪರೀಕ್ಷೆ ಸಿದ್ಧತೆ ಕುರಿತು ಸೋಮವಾರ ನಡೆದ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ಸೇರಿದಂತೆ ಹಲವು ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಈ ಹಿಂದೆ ಅರ್ಜಿ ಆಹ್ವಾನಿಸಿದ್ದು, ಸೆ.16ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.ಪರೀಕ್ಷೆಯನ್ನು ಸುಗಮವಾಗಿ ನಡೆಸಲು ದಾವಣಗೆರೆ ನಗರದಲ್ಲಿ 1, ಚನ್ನಗಿರಿ, ಹೊನ್ನಾಳಿ, ಜಗಳೂರು ಮತ್ತು ಹರಿಹರದಲ್ಲಿ ತಲಾ 2 ಸೇರಿದಂತೆ 9 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದರು.

‘ಪ್ರವೇಶ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳು ಒಮ್ಮೆ 6ನೇ ತರಗತಿಗೆ ವಸತಿ ಶಾಲೆಯಲ್ಲಿ ದಾಖಲಾದರೆ, 12ನೇ ತರಗತಿವರೆಗೂ ಅವರ ವಿದ್ಯಾಭ್ಯಾಸ ವಸತಿ ಶಾಲೆಗಳಲ್ಲಿ ನಿರಾತಂಕವಾಗಿ ಉತ್ತಮ ವ್ಯವಸ್ಥೆಯೊಂದಿಗೆ ಉಚಿತವಾಗಿ ಜರುಗಲಿದೆ’ ಎಂದರು.

‘ಪರೀಕ್ಷೆಯ ಮುನ್ನಾ ದಿನ ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಿಸಬೇಕು. ಪರೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಸಿಬ್ಬಂದಿ ಕಡ್ಡಾಯವಾಗಿ ಕನಿಷ್ಠ 1 ಡೋಸ್ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು. ಪ್ರತಿ ಕೊಠಡಿಗೆ ಗರಿಷ್ಠ 24 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂರಿಸಬೇಕು. ಕೋವಿಡ್ ಪಾಸಿಟಿವ್ ಕಂಡು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಚಿಗಟೇರಿ ಜಿಲ್ಲಾ ಆಸ್ಪತ್ರೆ ಬಳಿಯ ನರ್ಸಿಂಗ್ ಕಾಲೇಜನ್ನು ಪ್ರತ್ಯೇಕ ಪರೀಕ್ಷಾ ಕೇಂದ್ರವಾಗಿ ಸ್ಥಾಪಿಸಲಾಗಿದೆ’ ಎಂದು ಹೇಳಿದರು.

ಖಜಾನೆ ಇಲಾಖೆ ಉಪನಿರ್ದೇಶಕಿ ಪ್ರಭಾವತಿ ಎಸ್., ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪ್ರಾಚಾರ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.