ದಾವಣಗೆರೆ: ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ನೌಕರರು ಕುಟುಂಬದಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗುವ ಅಪಾಯವಿದೆ. ಪಾಲಕರನ್ನು ಮಕ್ಕಳು ಚೆನ್ನಾಗಿ ನೋಡಿಕೊಳ್ಳದಿರುವ ನಿದರ್ಶನಗಳಿವೆ. ನಿರ್ಲಕ್ಷ್ಯಕ್ಕೆ ಗುರಿಯಾದ ನಿವೃತ್ತ ನೌಕರರಿಗೆ ಸಂಘವು ಸಹಾಯಹಸ್ತ ಚಾಚಬೇಕು ಎಂದು ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.
ಇಲ್ಲಿನ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಚಿತ್ರದುರ್ಗ ಹಾಗೂ ದಾವಣಗೆರೆಯ ಸರಕಾರಿ ನೌಕರರ ಮಕ್ಕಳಿಗೆ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಹಲವು ನೌಕರರ ಜೀವನ ನಿವೃತ್ತಿಯ ಬಳಿಕ ನರಕಸದೃಶ್ಯವಾಗಿದೆ. ಪಾಲಕರನ್ನು ಆರೈಕೆ ಮಾಡದ ಮಕ್ಕಳನ್ನು ನೋಡುತ್ತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಮತ್ತೊಬ್ಬರೊಂದಿಗೆ ಮಕ್ಕಳನ್ನು ಹೋಲಿಸುವುದನ್ನು ಪಾಲಕರು ಬಿಡಬೇಕು. ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಪಾಲಕರು ಗುರುತಿಸಬೇಕು. ಪ್ರತಿಭೆ ಗುರುತಿಸುವ ಮಾತೃವಾತ್ಸಲ್ಯದ ತಾಯಿ, ತನ್ನ ಮಕ್ಕಳನ್ನು ಎತ್ತರಕ್ಕೆ ಬೆಳೆಸುತ್ತಾಳೆ. ಅವರಲ್ಲಿರುವ ವಿಶಿಷ್ಟ ಪ್ರತಿಭೆಗೆ ನೀರು ಎರೆಯುವ ಕೆಲಸ ಮಾಡಿ’ ಎಂದು ಹೇಳಿದರು.
‘ಪ್ರತಿಯೊಬ್ಬ ವ್ಯಕ್ತಿಯ ಜೀವನದ ಭವಿಷ್ಯ ಆಲೋಚನಾಕ್ರಮವನ್ನು ಅವಲಂಬಿಸಿದೆಯೇ ಹೊರತು ಅಂಗೈ ರೇಖೆಗಳನ್ನು ಅಲ್ಲ. ಆತ್ಮಸಾಕ್ಷಿಯನ್ನು ಅರಿಯದೇ ಗಿಳಿಶಾಸ್ತ್ರ ಕೇಳುವುದರಿಂದ ಪ್ರಯೋಜನವಿಲ್ಲ. ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಆಸಕ್ತಿ ಅರಿತು ಬದುಕು ರೂಪಿಸಿಕೊಳ್ಳಬೇಕು. ಜೀವನದಲ್ಲಿ ಹೆಜ್ಜೆ ಗುರುತುಗಳನ್ನು ಮೂಡಿಸಬೇಕು’ ಎಂದು ಕಿವಿಮಾತು ಹೇಳಿದರು.
‘ಇತ್ತೀಚೆಗೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಗಂಭೀರವಾಗಿದೆ. ಈ ಶಾಲೆಗಳಲ್ಲಿ ನಿರೀಕ್ಷಿತ ದಾಖಲಾತಿ ಕಾಣುತ್ತಿಲ್ಲ. ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ಸರ್ಕಾರಿ ನೌಕರರು ಶಾಲೆ ಉಳಿಸುವ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕು’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
ದಾವಣಗೆರೆ-ಚಿತ್ರದುರ್ಗ ಜಿಲ್ಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಸಂಘದ ರಾಜ್ಯ ಉಪಾಧ್ಯಕ್ಷ ವೀರೇಶ್ ಒಡೇನಪುರ, ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ದಾವಣಗೆರೆ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಪಾಲಾಕ್ಷಿ ಹಾಜರಿದ್ದರು.
ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ವ್ಯಾಪ್ತಿಯಲ್ಲಿರುವ ನೌಕರರು ನಿವೃತ್ತಿಯ ಬಳಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮನವಿ ಮಾಡಿದರು. ‘ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ನೌಕರರು ಎನ್‌ಪಿಎಸ್ ವ್ಯಾಪ್ತಿಯಲ್ಲಿದ್ದಾರೆ. ನಿವೃತ್ತಿ ಬಳಿಕ ಇವರಿಗೆ ಉತ್ತಮ ಪಿಂಚಣಿ ಸಿಗುವುದಿಲ್ಲ. ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಕೇಂದ್ರ ವೇತನ ಶ್ರೇಣಿಯನ್ನು ಜಾರಿಗೊಳಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.