ADVERTISEMENT

ರೈತರ ಸಮಸ್ಯೆ: ಸಭೆ ಕರೆಯಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಮೇ 2020, 12:09 IST
Last Updated 21 ಮೇ 2020, 12:09 IST
ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವಂತೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವಂತೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.   

ದಾವಣಗೆರೆ: ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ್ದರಿಂದ ರೈತರಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಜಿಲ್ಲಾಡಳಿತ ಕೂಡಲೇ ತುರ್ತು ಸಭೆಯನ್ನು ಕರೆಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಒತ್ತಾಯಿಸಿದ್ದಾರೆ.

ನಗರದ ಎಪಿಎಂಸಿ ಆವರಣದ ಸಭಾಂಗಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕವು ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮುಖಂಡರು ಚರ್ಚಿಸಿದರು.

ತೋಟಗಾರಿಕೆ ಹಾಗೂ ಕೃಷಿ ಬೆಳೆಗಳನ್ನು ಸಕಾಲಕ್ಕೆ ಮಾರಾಟ ಮಾಡಲು ಸಾಧ್ಯವಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಖರೀದಿ ಕೇಂದ್ರದಲ್ಲಿ ದ್ವಂದ್ವ ನೀತಿ ಇದೆ. ಖರೀದಿ ಕೇಂದ್ರಗಳು ಪ್ರತಿ ರೈತನ ಒಂದು ಎಕರೆಗೆ 16 ಕ್ವಿಂಟಲ್‌ ಭತ್ತವನ್ನು ನಿಗದಿಪಡಿಸಿರುವುದು ಸರಿಯಲ್ಲ. ಬಾಕಿ ಉಳಿದ ಭತ್ತವನ್ನು ಎಲ್ಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಬೇಕು? ಹೀಗಾಗಿ ರೈತರು ಬೆಳೆದಿರುವ ಅಷ್ಟೂ ಭತ್ತಗಳನ್ನು ಖರೀದಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮುಂಗಾರಿನ ಖರೀದಿ ಕೇಂದ್ರವು ಮೇ 31ಕ್ಕೆ ಮುಗಿಯುತ್ತಿದೆ. ಇದರ ಅವಧಿಯನ್ನೂ ವಿಸ್ತರಿಸಬೇಕು. ಬ್ಯಾಂಕ್‌ಗಳ ಅಧಿಕಾರಿಗಳು ಸಾಲ ಕಟ್ಟುವಂತೆ ರೈತರಿಗೆ ಹಿಂಸೆ ನೀಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ. ಇದರ ಬಗ್ಗೆ ಸಾಕಷ್ಟು ಬಾರಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ. ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಾಡು ಪ್ರಾಣಿಗಳ ಹಾವಳಿಯಿಂದಾಗಿ ಬೆಳೆಗಳು ಕೈಗೆ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ರೈತರ ಸಭೆಯನ್ನು ಕರೆಯಬೇಕು ಎಂದು ಮನವಿ ಮಾಡಿದರು.

ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್‌, ಜಿಲ್ಲಾ ಘಟಕದ ಗೌರವಾಧ್ಯಕ್ಷ ಚಿಕ್ಕನಹಳ್ಳಿ ರೇವಣಸಿದ್ದಪ್ಪ, ಉಪಾಧ್ಯಕ್ಷ ಪಾಮೇನಹಳ್ಳಿ ಲಿಂಗರಾಜ್‌, ಆನಗೋಡ ಭೀಮಣ್ಣ, ಬಲ್ಲೂರು ಪರಶುರಾಮರೆಡ್ಡಿ, ಕೊಟ್ರಪ್ಪ ಬೂದಾಳ್‌, ಅಣ್ಣಪ್ಪ ಬಲ್ಲೂರು, ನಿಂಗಪ್ಪ, ಎ.ಎಂ. ಕುಮಾರಸ್ವಾಮಿ ಅಣಬೇರು ಅವರು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.