ADVERTISEMENT

20ರೊಳಗೆ ಮೀಸಲಾತಿ ಘೋಷಿಸದಿದ್ದರೆ ಉಗ್ರ ಹೋರಾಟ- ಪ್ರಸನ್ನಾನಂದ ಪುರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 6:19 IST
Last Updated 6 ಅಕ್ಟೋಬರ್ 2021, 6:19 IST
ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ ಕಾರ್ಯಾಗಾರ ಹಾಗೂ ಮೀಸಲಾತಿ ಕುರಿತ ಸಂವಾದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿದರು.
ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ ಕಾರ್ಯಾಗಾರ ಹಾಗೂ ಮೀಸಲಾತಿ ಕುರಿತ ಸಂವಾದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿದರು.   

ಹರಿಹರ: ವಾಲ್ಮೀಕಿ ಸಮುದಾಯಕ್ಕೆ ಅ. 20ರ ಒಳಗಾಗಿ ಶೇ 7.5 ಮೀಸಲಾತಿ ಘೋಷಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಸಿದರು.

ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ ಕಾರ್ಯಾಗಾರ ಹಾಗೂ ಮೀಸಲಾತಿ ಕುರಿತ ಸಂವಾದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನಾಯಕ ಸಮಾಜಕ್ಕೆ ಶೇ 7.5 ಮೀಸಲಾತಿ ಆಗ್ರಹಿಸಿ ಪಾದಯಾತ್ರೆ ಸೇರಿ ಅನೇಕ ಹೋರಾಟಗಳನ್ನು ನಡೆಸಿ ಸರ್ಕಾರಕ್ಕೆ ಸಾಕಷ್ಟು ಸಮಯಾವಕಾಶವನ್ನು ನೀಡಲಾಗಿದೆ. ಆದರೂ, ಸಮಾಜದ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಪೀಠದ ಆವರಣದಲ್ಲಿ ಅ.20ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ. ಸರ್ಕಾರ, ಮೀಸಲಾತಿ ಕುರಿತು ಸ್ಪಷ್ಟ ನಿರ್ಧಾರ ಘೋಷಿಸದಿದ್ದರೆ ಸಮಾಜದಿಂದ ಸರ್ಕಾರದ ವಿರುದ್ಧ ಉಗ್ರ ಹೋರಾಟದ ಘೋಷಣೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ, ಉದ್ಯೋಗಕ್ಕಾಗಿ ಶೇ 7.5 ಮೀಸಲಾತಿ ಘೋಷಿಸಿ, ಸಾಮಾಜಿಕ ನ್ಯಾಯ ನೀಡಬೇಕು ಎಂದು ಆಗ್ರಹಿಸಿದರು.

ಸಂಸದ ದೇವೇಂದ್ರಪ್ಪ, ಶಾಸಕರಾದ ಎಸ್.ವಿ. ರಾಮಚಂದ್ರ, ಬಸವನಗೌಡ ತುರುವಿಹಾಳ, ಅನಿಲ್ ಚಿಕ್ಕಮಾದು, ಬಸವನಗೌಡ ದದ್ದಲ್, ಸೋಮಲಿಂಗಪ್ಪ, ನಿವೃತ್ತ ಜಿಲ್ಲಾಧಿಕಾರಿ ಬಿ. ಶಿವಪ್ಪ ಹಾಗೂ ನಾಯಕ ಸಮಾಜದ ಮುಖಂಡರು, ಅಧಿಕಾರಿಗಳು, ಜನ ಪ್ರತಿನಿಧಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.